ಮಂಗಳೂರು, ಜುಲೈ 11: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಖಾಸಗಿ ಬಸ್ ಕಂಡಕ್ಟರ್ನನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಮೀಪದ ಕಲ್ಲಾಪು ನಿವಾಸಿ, ಮೂಲತಃ ಕೇರಳದ 32 ವರ್ಷದ ಇಫ್ಖಾನ್ ಎಂದು ಗುರುತಿಸಲಾಗಿದೆ. ಈತ ಮಂಗಳೂರು–ವಿಟ್ಲ ಮಾರ್ಗದಲ್ಲಿ ಸಂಚರಿಸುವ ‘ಸೆಲೆನ್’ ಖಾಸಗಿ ಬಸ್ಸಿನಲ್ಲಿ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದನು.
ಘಟನೆಯ ವಿವರ
ಜುಲೈ 9ರಂದು ಸಂಜೆ ಸುಮಾರು 5 ಗಂಟೆಯ ವೇಳೆಗೆ ಕಾಲೇಜು ವಿದ್ಯಾರ್ಥಿನಿಯರು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಆರೋಪಿ ಇಫ್ಖಾನ್ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಅಸಭ್ಯ ಸನ್ನೆಗಳನ್ನು ಮಾಡಿದ್ದಾನೆ ಎನ್ನಲಾಗಿದೆ. ಅಲ್ಲದೆ, ತನ್ನ ಗುಪ್ತಾಂಗವನ್ನು ಪ್ರದರ್ಶಿಸಿ, ಬಸ್ಸಿನ ಹಿಂದಿನ ಸೀಟಿಗೆ ಬರುವಂತೆ ವಿದ್ಯಾರ್ಥಿನಿಯರನ್ನು ಕರೆಯುವ ಮೂಲಕ ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.

ಘಟನೆಯಿಂದ ಆತಂಕಗೊಂಡ ವಿದ್ಯಾರ್ಥಿನಿಯರು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದಲ್ಲಿ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಜುಲೈ 10ರಂದು ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಸ್ತುತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.




