ಉಡುಪಿ, ಆ. 7: ಉಡುಪಿ ನಗರದ ನಾರಾಯಣ ಗುರು ಸಭಾಂಗಣದಲ್ಲಿ ಇಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಭೇಟಿ ನೀಡಿದ ಸಂದರ್ಭದಲ್ಲಿ, ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ತುಳುನಾಡಿನ ಸಾಂಸ್ಕೃತಿಕ ಗುರುತಿನ ಪ್ರತೀಕವಾದ ಸೂರ್ಯ–ಚಂದ್ರ ಚಿಹ್ನೆ ಹೊಂದಿರುವ ಶಾಲನ್ನು ಹೊದಿಸಿ, ಪುಷ್ಪಗುಚ್ಛ ನೀಡಿ ಅಭಿನಂದಿಸಲಾಯಿತು. ಬಳಿಕ ಇದೇ ಆಗಸ್ಟ್ 16ರಂದು ನಡೆಯಲಿರುವ “ಆಟಿಡೊಂಜಿ ದಿನ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೀಡಿ, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಆಹ್ವಾನಿಸಲಾಯಿತು.

ನಟ ಚೇತನ್ ಅಹಿಂಸಾ ಅವರು ತುಳುನಾಡಿನ ಸಂಸ್ಕೃತಿ, ಭಾಷೆ ಹಾಗೂ ಪರಂಪರೆಯ ಸಂರಕ್ಷಣೆಗೆ ತುಳುನಾಡ ರಕ್ಷಣಾ ವೇದಿಕೆ ಕೈಗೊಂಡಿರುವ ವಿವಿಧ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಆಟಿಡೊಂಜಿ ದಿನದಂತಹ ಕಾರ್ಯಕ್ರಮಗಳು ತುಳುನಾಡಿನ ವೈಶಿಷ್ಟ್ಯಪೂರ್ಣ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ, ಜಿಲ್ಲಾ ಮಹಿಳಾ ಅಧ್ಯಕ್ಷೆ ನಾಗಲಕ್ಷ್ಮಿ ಸುಬ್ರಮಣ್ಯ ನಗರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಪೂಜಾರಿ, ಕಾಪು ತಾಲೂಕು ಅಧ್ಯಕ್ಷ ನಿತಿನ್ ಕುಮಾರ್ ಶೆಟ್ಟಿ, ಬೈರಂಪಳ್ಳಿ ಘಟಕದ ಅಧ್ಯಕ್ಷ ಕೃಷ್ಣಾನಂದ ನಾಯಕ್, ಜಿಲ್ಲಾ ಜೊತೆ ಕಾರ್ಯದರ್ಶಿ ಪ್ರೀತಂ ಡಿಕೋಸ್ಟಾ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಂಕರ್ ಉಡುಪಿ, ಜಿಲ್ಲಾ ಸಂಘಟನೆ ಜೊತೆ ಕಾರ್ಯದರ್ಶಿ ಕೃಷ್ಣ ಮಾರ್ಪಳ್ಳಿ, ಮುಖಂಡರಾದ ಅಜಯ್ ಕುಲಾಲ್, ಸಾತ್ವಿಕ್ ಪ್ರಭು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.
ತುಳುನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಭಾಷೆಯ ಉಳಿವು-ಬೆಳವಣಿಗೆಗಾಗಿ ಸಂಘಟನೆಯು ನಿರಂತರವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಆಗಸ್ಟ್ 16ರಂದು ನಡೆಯಲಿರುವ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟನೆಯ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.






