ಮುದರಂಗಡಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿ ಪೇಟೆಯಲ್ಲಿ ಹಾಡಹಗಲೇ ಕಾಂಗ್ರೆಸ್ ಮುಖಂಡ ಹಾಗೂ ಮುದರಂಗಡಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾ (ಪ್ರಿನ್ಸ್) ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯನ್ನು ಕಾಪು ಪೊಲೀಸ್ ಠಾಣೆಯ ಪಿಎಸ್ಐ ತೇಜಸ್ವಿ ಹಾಗೂ ಕಾಪು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಪ್ರಸನ್ನ ಅವರ ನೇತೃತ್ವದ ಪೊಲೀಸ್ ತಂಡ ಬಂಧಿಸಿ ಕರೆದೊಯ್ಯುತ್ತಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ.
ಬಂಧನಕ್ಕೆ ಪ್ರತಿರೋಧ ತೋರಿದ ಆರೋಪಿಯು ಪೊಲೀಸರ ಮೇಲೆ ಹಲ್ಲೆಗೆ ಮುಂದಾದನು ಎನ್ನಲಾಗಿದ್ದು, ಈ ಸಂದರ್ಭದಲ್ಲಿ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿದುಬಂದಿದೆ.
ಗುಂಡೇಟಿನಿಂದ ಗಾಯಗೊಂಡ ಆರೋಪಿಯನ್ನು ತಕ್ಷಣವೇ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆಯ ಬಳಿಕ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಹರಿರಾಮ್ ಶಂಕರ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡ ಆರೋಪಿಯ ವಿಚಾರಣೆ ನಡೆಸಿದ್ದಾರೆ.
ಮುದರಂಗಡಿ ಪೇಟೆಯಲ್ಲಿ ನಡೆದಿದ್ದ ಈ ಭೀಕರ ಹತ್ಯೆ ಪ್ರಕರಣವು ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಇದೀಗ ಪ್ರಮುಖ ಆರೋಪಿಯ ಬಂಧನದೊಂದಿಗೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ಮಾಹಿತಿಯನ್ನು ತನಿಖೆಯ ಬಳಿಕ ಬಹಿರಂಗಪಡಿಸುವ ಸಾಧ್ಯತೆಯಿದೆ.

