ಮಂಗಳೂರು, ಜೂನ್ 5 : ಜನತಾದಳ ಜಾತ್ಯತೀತ (ಜೆಡಿಎಸ್) ಪಕ್ಷದ ಮಹಿಳಾ ಘಟಕದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಅಧ್ಯಕ್ಷೆಯಾಗಿ ಶ್ರೀಮತಿ ರಮೀಝಾ ಭಾನು ಅವರನ್ನು ನೇಮಕ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಜಾಕೆ ಮಾಧವ ಗೌಡ ಅವರ ಶಿಫಾರಸಿನ ಮೇರೆಗೆ, ಜೆಡಿಎಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ ಅವರು ಬೆಂಗಳೂರಿನ ಜೆ.ಪಿ. ಭವನದಲ್ಲಿ ನಡೆದ ರಾಜ್ಯ ಮಹಿಳಾ ಕಾರ್ಯಕರ್ತೆಯರ ಸಭೆಯಲ್ಲಿ ರಮೀಜಾ ನಾಸೀರ್ ಅವರಿಗೆ ನೇಮಕಾತಿ ಆದೇಶ ಪತ್ರವನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿ.ಕೆ. ಕೃಷ್ಣ ರೆಡ್ಡಿ ಮಾಜಿ ಸಚಿವರಾದ ಶ್ರೀಮತಿ ಲೀಲಾದೇವಿ ಆರ್. ಪ್ರಸಾದ್ ಅವರು, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕೆ.ಎ. ತಿಪ್ಪೇಸ್ವಾಮಿ ಅವರು, ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಶ್ರೀಮತಿ ರಶ್ಮಿ ರಾಮೇಗೌಡ ಅವರು ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ರಮೀಝಾ ಭಾನು ಅವರು ಮಾಜಿ ನಗರಪಾಲಿಕೆ ಸದಸ್ಯರಾಗಿದ್ದು ಹಲವು ವರ್ಷಗಳಿಂದ ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಪಕ್ಷದ ತತ್ವ ಸಿದ್ಧಾಂತಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಹಾಗೂ ಮಹಿಳೆಯರನ್ನು ರಾಜಕೀಯವಾಗಿ ಸಬಲೀಕರಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಪಕ್ಷವು ಈ ಜವಾಬ್ದಾರಿಯನ್ನು ನೀಡಿದೆ.

ನೇಮಕಾತಿಯ ಬಳಿಕ ಮಾತನಾಡಿದ ರಮೀಝಾ ಭಾನು ಅವರು, ಪಕ್ಷದ ರಾಜ್ಯ ಹಾಗೂ ಜಿಲ್ಲಾದ್ಯಕ್ಷ ಜಾಕೆ ಮಾಧವ ಗೌಡ ಮತ್ತು ಇತರ ನಾಯಕರಿಗೆ ಕೃತಜ್ಞತೆ ಸಲ್ಲಿಸಿ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಹಿಳಾ ಘಟಕವನ್ನು ಸಂಘಟಿತಗೊಳಿಸಿ ಪಕ್ಷದ ಬಲವರ್ಧನೆಗೆ ಶ್ರಮಿಸುವುದಾಗಿ ತಿಳಿಸಿದರು. ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸುವುದರ ಜೊತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರನ್ನು ಜೆಡಿಎಸ್ ಪಕ್ಷದತ್ತ ಆಕರ್ಷಿಸಲು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ಹೇಳಿದರು.ಜಿಲ್ಲೆಯಲ್ಲಿ ಮಹಿಳಾ ಘಟಕ ಮುಂಬರುವ ದಿನಗಳಲ್ಲಿ ಇನ್ನಷ್ಟು ಬಲಿಷ್ಠವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.








