ಬೆಳ್ತಂಗಡಿ : 2012ರಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳ ಹತ್ಯೆಯ ಪ್ರಕರಣದಲ್ಲಿ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಉನ್ನತ ಮಟ್ಟದ ತನಿಖೆ ನಡೆಸಿ ಸತ್ಯಾಂಶ ಹೊರಬರುವಂತೆ ಸಿಐಡಿ ನಂತರದಲ್ಲಿ ದೇಶದ ಅತ್ಯುನ್ನತ ತನಿಖಾ ಸಂಸ್ಥೆಯಾದ ಸಿಬಿಐ ಮೂಲಕ ತನಿಖೆ ನಡೆಸುವಂತೆ ಸರ್ಕಾರವನ್ನು ಶ್ರೀ ಕ್ಷೇತ್ರದ ಪರವಾಗಿ ಒತ್ತಾಯಿಸಲಾಗಿತ್ತು.ಅದರಂತೆ ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ಆದೇಶಿಸಿರುತ್ತದೆ.
ತನಿಖೆ ನಡೆಸಿ ಇಲಾಖೆ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿರುತ್ತದೆ. ಹೀಗಾಗಿ ಸಾರ್ವಜನಿಕರು ಸೌಜನ್ಯಾಳ ಕೊಲೆ ಪ್ರಕರಣಕ್ಕೆ ಸಂಬಂದಿಸಿದ ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದು ಡಾ. ವೀರೇಂದ್ರ ಹೆಗ್ಗಡೆಯವರು ಹೇಳಿದ್ದಾರೆ.
ಸೌಜನ್ಯ ಸಾವು ಪ್ರಕರಣದಲ್ಲಿ ಕ್ಷೇತ್ರದ ಬಗ್ಗೆ ಅವಹೇಳನಕಾರಿ, ಸುಳ್ಳು ಹೇಳಿಕೆ, ಆಪಾದನೆ, ವದಂತಿಗಳನ್ನು ಹಬ್ಬಿಸುತ್ತಿರುವುದರ ಬಗ್ಗೆ ಭಕ್ತಾದಿಗಳು ಹಾಗೂ ಸಾರ್ವಜನಿಕರು ಗೊಂದಲಕ್ಕೆ ಈಡಾಗಬಾರದು. ನ್ಯಾಯಾಲಯವು ವಿಚಾರಣೆ ನಡೆಸಿ ಆರೋಪಿತನನ್ನು ಪ್ರಕರಣದಲ್ಲಿ ಖುಲಾಸೆಗೊಳಿಸಿದ್ದು ತಿಳಿದಿದೆ. ಆ ನಂತರದಲ್ಲಿ ಕೆಲವು ವ್ಯಕ್ತಿಗಳು ಶ್ರೀ ಕ್ಷೇತ್ರವನ್ನು ಹಾಗೂ ನಮ್ಮ ಕುಟುಂಬವನ್ನು ಗುರಿಯಾಗಿರಿಸಿಕೊಂಡು ಸುಳ್ಳು ಆರೋಪ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಸರ್ಕಾರ ಸದರಿ ಪ್ರಕರಣವನ್ನು ಸಿ.ಬಿ.ಐ. ತನಿಖೆ ನಡೆಸಲು ಆದೇಶಿಸಿರುತ್ತದೆ ಎಂದು ಅವರು ತಿಳಿಸಿದ್ದಾರೆ.