ಮಂಗಳೂರು: ದ.ಕ.ಜಿಲ್ಲೆಯಲ್ಲಿ ಅಹಿತಕರ ಘಟನೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ವಾರದವರೆಗೆ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಯುವ ಸವಾರರು ಓಡಾಡುದಕ್ಕೆ ನಿರ್ಬಂಧ ವಿಧಿಸಲಾಗುತ್ತದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆಯ ಬಳಿಕ ಮಾತನಾಡಿದ ಅವರು, ಇದೀಗ ಇರುವ ರಾತ್ರಿ ನಿರ್ಬಂಧದಲ್ಲಿ ಹಂತಹಂತವಾಗಿ ಸಡಿಲಿಕೆ ಮಾಡಲಾಗುತ್ತದೆ. ಆ ಬಳಿಕ ಮುನ್ನೆಚ್ಚರಿಕಾ ದೃಷ್ಟಿಯಿಂದ ದ್ವಿಚಕ್ರ ವಾಹನಗಳಲ್ಲಿ ಇಬ್ಬರು ಪುರುಷ ಸವಾರರ ಓಡಾಟಕ್ಕೆ ಕಡಿವಾಣ ಹಾಕಲಾಗುತ್ತದೆ. ಆದರೆ ಹಿರಿಯ ನಾಗರಿಕರು, ಮಹಿಳೆಯರು ಹಾಗೂ ಮಕ್ಕಳಿಗೆ ಈ ನಿರ್ಬಂಧ ಇರುವುದಿಲ್ಲ ಎಂದು ಹೇಳಿದರು.
ಫಾಝಿಲ್ ಹಂತಕರೆಲ್ಲರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ತನಿಖಾಧಿಕಾರಿ ಮಹೇಶ್ ಕುಮಾರ್ ಆರೋಪಿಗಳನ್ನು ಎಲ್ಲಾ ಆಯಾಮಗಳಲ್ಲಿ ತನಿಖೆ ಮಾಡಿ ಚಾರ್ಜ್ ಶೀಟ್ ಸಲ್ಲಿಸುತ್ತಾರೆ. ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಬಗ್ಗೆ ನಮಗೆ ಮಾಹಿತಿಯಿದೆ. ಸಂಚು ರೂಪಿಸಿದವರು, ಹತ್ಯೆ ಮಾಡಿದವರ ಬಗ್ಗೆ ಸಂಪೂರ್ಣ ಮಾಹಿತಿಯಿದೆ. ಅವರೆಲ್ಲರೂ ತಲೆಮರೆಸಿಕೊಂಡಿದ್ದಾರೆ. ಸದ್ಯದಲ್ಲಿಯೇ ಅವರನ್ನು ದಸ್ತಗಿರಿ ಮಾಡುವ ಪ್ರಯತ್ನ ನಡೆಯುತ್ತಿದೆ. ಪ್ರಕರಣದ ತನಿಖೆಯನ್ನು ಎನ್ಐಎಗೆ ಒಪ್ಪಿಸಲಾಗಿದೆ. ಶೀಘ್ರದಲ್ಲೇ ಕರ್ನಾಟಕ ಪೊಲೀಸರು ಆರೋಪಿಗಳನ್ನು ಬಂಧಿಸಲಿದ್ದಾರೆ ಎಂದು ಹೇಳಿದರು.
ಈಗಾಗಲೇ ದ.ಕ.ಜಿಲ್ಲೆಯಲ್ಲಿ 12 ಗಡಿ ಚೆಕ್ ಪೋಸ್ಟ್ ಗಳಿವೆ. ಸಿಎಂ ನಿರ್ದೇಶನದಂತೆ ಗಡಿ ಚೆಕ್ ಪೋಸ್ಟ್, ಸಿಸಿ ಕ್ಯಾಮೆರಾಗಳನ್ನು ಹೆಚ್ಚಳ ಮಾಡಲಾಗುತ್ತಿದೆ. ಸೂಕ್ಷ್ಮ ಪ್ರದೇಶಗಳ ಬಗ್ಗೆ, ಕೆಲ ಸಂಘಟನೆಗಳ ಮೇಲೂ ನಿಗಾ ಇರಿಸಿದ್ದೇವೆ. ಪೊಲೀಸ್ ಅಧಿಕಾರಿಗಳು ಕಿಡಿಗೇಡಿಗಳ ಮೇಲೆ ಹದ್ದಿನ ಕಣ್ಣಿರಿಸಿದ್ದಾರೆ. ಆದ್ದರಿಂದ ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸಾಕಷ್ಟು ಕ್ರಮ ಜರುಗಿಸಲಿದ್ದೇವೆ ಎಂದು ಅಲೋಕ್ ಕುಮಾರ್ ಹೇಳಿದರು.
