ಬೆಳ್ತಂಗಡಿ: ನಾವೂರು ಪೇಟೆಯ ಸ್ವಾತಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪ್ರಕರಣವನ್ನು ತುಳುನಾಡ ರಕ್ಷಣಾ ವೇದಿಕೆ (ರಿ.) ತೀವ್ರವಾಗಿ ಖಂಡಿಸಿದ್ದು, ಕೃತ್ಯದಲ್ಲಿ ಭಾಗಿಯಾಗಿರುವ ಎಲ್ಲ ಆರೋಪಿಗಳನ್ನು ಪತ್ತೆಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ All india consumer Protection Organisation ರಾಜ್ಯಾದ್ಯಕ್ಷರು ಮತ್ತು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷರಾಗಿರುವ ಯೋಗಿಶ್ ಶೆಟ್ಟಿ ಜಪ್ಪು ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.
ಅಕ್ಟೋಬರ್ 7ರಂದು ತಡರಾತ್ರಿ ನಡೆದ ಈ ಘಟನೆಯಲ್ಲಿ ದುಷ್ಕರ್ಮಿಗಳು ಕ್ಲಿನಿಕ್ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ್ದರು ಎನ್ನಲಾಗಿದೆ. ಪರಿಣಾಮವಾಗಿ ಕ್ಲಿನಿಕ್ನಲ್ಲಿದ್ದ ಔಷಧಗಳು ಹಾಗೂ ವೈದ್ಯಕೀಯ ಉಪಕರಣಗಳು ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಸುಮಾರು 2ರಿಂದ 3 ಲಕ್ಷ ರೂಪಾಯಿಗಳಷ್ಟು ನಷ್ಟ ಸಂಭವಿಸಿದೆ. ಜನರಿಗೆ ಆರೋಗ್ಯ ಸೇವೆ ಒದಗಿಸುವ ವೈದ್ಯಕೀಯ ಕೇಂದ್ರವನ್ನೇ ಗುರಿಯಾಗಿಸಿಕೊಂಡು ನಡೆದ ಈ ಕೃತ್ಯ ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.
ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಕಲಂ 326 ಮತ್ತು 324ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ ಶಂಕಿತರನ್ನೂ ವಿಚಾರಣೆಗೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.
ನಾವೂರು ಗ್ರಾಮಸ್ಥರು ಸಭೆ ನಡೆಸಿ ಘಟನೆಯನ್ನು ಖಂಡಿಸಿದ್ದಲ್ಲದೆ, ತಪ್ಪಿತಸ್ಥರನ್ನು ಶೀಘ್ರವಾಗಿ ಪತ್ತೆಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಆಗ್ರಹಿಸಿದ್ದರು.
ವೈದ್ಯಕೀಯ ಸೇವೆಯ ಸುರಕ್ಷತೆಗೆ ಆದ್ಯತೆ ನೀಡಬೇಕು
ಈ ಘಟನೆಯ ಕುರಿತು ಪ್ರತಿಕ್ರಿಯಿಸಿದ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ಅವರು, ವೈದ್ಯಕೀಯ ಸೇವೆ ಜನಸಾಮಾನ್ಯರ ಬದುಕಿನೊಂದಿಗೆ ನೇರವಾಗಿ ಸಂಬಂಧ ಹೊಂದಿದೆ. ಇಂತಹ ಸೇವಾ ಕೇಂದ್ರದ ಮೇಲೆ ದಾಳಿ ನಡೆಸುವುದು ಅತ್ಯಂತ ಗಂಭೀರ ಕೃತ್ಯವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
“ಕಾನೂನನ್ನು ಕೈಗೆತ್ತಿಕೊಂಡು ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ವೈದ್ಯರು ಮತ್ತು ವೈದ್ಯಕೀಯ ಸೇವಾ ಕೇಂದ್ರಗಳ ಸುರಕ್ಷತೆಯನ್ನು ಖಾತರಿಪಡಿಸುವುದು ಅಗತ್ಯ. ಬಂಧಿತ ಆರೋಪಿಯ ವಿಚಾರಣೆಯನ್ನು ಸಮಗ್ರವಾಗಿ ನಡೆಸಿ, ಘಟನೆಯ ಹಿಂದೆ ಇತರರು ಭಾಗಿಯಾಗಿದ್ದರೆ ಅವರನ್ನೂ ಪತ್ತೆಹಚ್ಚಬೇಕು. ಪ್ರಕರಣದ ತನಿಖೆಯನ್ನು ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ನಡೆಸಿ, ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆಯಾಗುವಂತೆ ಪೊಲೀಸ್ ಇಲಾಖೆ ಕ್ರಮ ವಹಿಸಬೇಕು” ಎಂದು ಯೋಗಿಶ್ ಶೆಟ್ಟಿ ಜಪ್ಪು ಒತ್ತಾಯಿಸಿದ್ದಾರೆ.
ನಿಷ್ಪಕ್ಷಪಾತ ತನಿಖೆಗೆ ಆಗ್ರಹ
ಘಟನೆ ನಡೆದ ತಕ್ಷಣ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಡಿವೈಎಸ್ಪಿ ರೋಹಿಣಿ ಅವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್. ನೇತೃತ್ವದ ಪೊಲೀಸ್ ತಂಡ ತನಿಖೆ ನಡೆಸುತ್ತಿದೆ. ಪೊಲೀಸ್ ಉಪನಿರೀಕ್ಷಕರಾದ ಆನಂದ್ ಮತ್ತು ಸಿಖಂದರ್ ಪಾಷಾ ಸೇರಿದಂತೆ ಪೊಲೀಸ್ ಸಿಬ್ಬಂದಿ ಆರೋಪಿಗಳ ಪತ್ತೆಗೆ ಶ್ರಮಿಸುತ್ತಿದ್ದಾರೆ.
ವೈದ್ಯಕೀಯ ಸೇವೆ ನೀಡುವ ಕೇಂದ್ರಗಳ ಮೇಲೆ ಇಂತಹ ದಾಳಿಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣದ ಸಂಪೂರ್ಣ ಸತ್ಯಾಂಶವನ್ನು ಹೊರತಂದು, ಕೃತ್ಯದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನೂ ಕಾನೂನಿನ ಮುಂದೆ ತರುವ ಮೂಲಕ ಸಾರ್ವಜನಿಕರಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಮೇಲಿನ ವಿಶ್ವಾಸವನ್ನು ಬಲಪಡಿಸಬೇಕು ಎಂದು ಯೋಗಿಶ್ ಶೆಟ್ಟಿ ಜಪ್ಪು ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ

