ಬೆಂಗಳೂರು : ಕಂದಾಯ ಭೂಮಿಯಲ್ಲಿ ನಿರ್ಮಿಸಲಾದ ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಕಂದಾಯ ಭೂಮಿಯಲ್ಲಿ ನಿರ್ಮಿಸಲಾದ ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಬಿಬಿಎಂಪಿಗೆ ಆದಾಯ ಹೆಚ್ಚಾಗುವ ಜೊತೆಗೆ ಆಸ್ತಿ ಮಾಲೀಕರಿಗೆ ಸೂಕ್ತ ದಾಖಲೆ ದೊರೆಯುತ್ತದೆ. ಪ್ರಸ್ತುತ ಪ್ರಕರಣ ಸುಪ್ರೀಂಕೋರ್ಟ್ ನಲ್ಲಿದ್ದು, ಅಗತ್ಯ ದಾಖಲೆಗಳನ್ನು ಸಲ್ಲಿಸಿ ಅಕ್ರಮ-ಸಕ್ರಮ ಯೋಜನೆ ಜಾರಿಗೆ ಅನುಮತಿ ಪಡೆಯಲಾಗುವುದು ಎಂದು ಹೇಳಿದ್ದಾರೆ.
ಕೋವಿಡ್ ಹಿನ್ನೆಲೆಯಲ್ಲಿ ಬಿಬಿಎಂಪಿ ಸಹಾಯಧನ ನೀಡುವ ಒಂಟಿ ಮನೆ ಯೋಜನೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಆ ಯೋಜನೆ ಮತ್ತೆ ಆರಂಭಿಸಲು ತೀರ್ಮಾನಿಸಲಾಗಿದೆ. ಈ ಕುರಿತು ಬಿಬಿಎಂಪಿ ಅಧಿಕಾರಿಗಳ ಜೊತೆಗೆ ಚರ್ಚಿಸಲಾಗಿದ್ದು, ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು ಎಂದರು.
