ರಾಜ್ಯದ ಎಲ್ಲಾ ಸರ್ಕಾರಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಮತ್ತು ನೀರಿನ ವ್ಯವಸ್ಥೆ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ‘ಗೃಹ ಜ್ಯೋತಿ’ ಯೋಜನೆಯಡಿ ವಿದ್ಯುಚ್ಛಕ್ತಿಯನ್ನು ಉಚಿತವಾಗಿ ಒದಗಿಸುತ್ತಿರುವ ರೀತಿಯಲ್ಲಿಯೇ, ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೂ ಸಹ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯ ಒದಗಿಸಲಿದೆ.ಸರ್ಕಾರಿ ಶಾಲೆಗಳಲ್ಲಿ ಉಳಿಕೆಯಾಗುವ ನಿರ್ವಹಣಾ ಅನುದಾನದಿಂದ ಶಾಲೆಗಳ ಗುಣಮಟ್ಟ ಅಭಿವೃದ್ಧಿಪಡಿಸಿ ಮಕ್ಕಳ ದಾಖಲಾತಿಯನ್ನು ಹೆಚ್ಚಿಸಬಹುದಾಗಿರು ವುದರಿಂದ, ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಬಾಕಿಯಿರುವ ವಿದ್ಯುತ್ ಮತ್ತು ನೀರಿನ ಬಿಲ್ಲುಗಳನ್ನು ಪಾವತಿ ಮಾಡುವುದರಿಂದ ವಿನಾಯಿತಿ ನೀಡುವಂತೆ ಹಾಗೂ ಉಚಿತವಾಗಿ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಮನವಿ ಮಾಡಿದ್ದರು.ರಾಜ್ಯದ ಎಲ್ಲಾ ಸರ್ಕಾರಿ ಶಾಲಾ- ಕಾಲೇಜುಗಳಿಗೆ ಉಚಿತವಾಗಿ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸಲು ಆರ್ಥಿಕ ಇಲಾಖೆಯು ಸಹಮತಿ ನೀಡಿರುತ್ತದೆ. ಮೇಲ್ಕಂಡ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರ ಸರ್ಕಾರ ಆದೇಶ ನೀಡಿದ್ದು, ಶಾಲಾ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ/ ಬೋಧಕೇತರ ಸಿಬ್ಬಂದಿಗಳು ಹಾಗು ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಉಚಿತವಾಗಿ ಒದಗಿಸಲಾಗುವ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಬಳಕೆ ಮಾಡುವಂತೆ ಹಾಗೂ ಸಾಧ್ಯವಾದಷ್ಟು ಮಿತವ್ಯಯ ಸಾಧಿಸಲು ಅಗತ್ಯ ಕ್ರಮವಹಿಸತಕ್ಕದ್ದು ಎಂದು ಸರ್ಕಾರದ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ
©2021 Tulunada Surya | Developed by CuriousLabs