ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಲು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲು ಜಿಲ್ಲಾ ಪಂಚಾಯತ್ ಸಜ್ಜಾಗಿದೆ. ಈ ಸಂಬಂಧ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ ಕಾರ್ಭಾರಿ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೊಂದಿಗೆ ವೀಡಿಯೋ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವ ಹಾಗೂ ಸುಡುವ ಪ್ರಕರಣಗಳನ್ನು ಗುರುತಿಸಿ ತಕ್ಷಣ ದಂಡ ವಿಧಿಸುವಂತೆ ಸೂಚಿಸಿದರು. ದಂಡ ಪಾವತಿಸಲು ವಿಫಲವಾದವರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸುವುದಾಗಿ ಎಚ್ಚರಿಕೆ ನೀಡಿದರು. ಪ್ರತಿ ತಾಲೂಕಿನಿಂದ ತಪ್ಪಿತಸ್ಥರ ವಿರುದ್ಧ ಕೈಗೊಂಡ ಕ್ರಮಗಳ ವರದಿಯನ್ನು ಕೂಡಲೇ ಸಲ್ಲಿಸುವಂತೆ ಆದೇಶಿಸಿದರು.
ಪ್ರತಿ ತಿಂಗಳ 1ನೇ ಮತ್ತು 3ನೇ ಶನಿವಾರ ನಡೆಯುವ ‘ಸ್ವಚ್ಛ ಶನಿವಾರ’ ಅಭಿಯಾನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು, ಗ್ರಾಮ ಪಂಚಾಯತ್ಗಳು ತಮ್ಮ ವ್ಯಾಪ್ತಿಯ ಎಲ್ಲಾ ರಸ್ತೆಗಳ ಇಕ್ಕೆಲಗಳನ್ನು ಸಂಪೂರ್ಣ ಸ್ವಚ್ಛಗೊಳಿಸಬೇಕು ಎಂದು ಸೂಚನೆ ನೀಡಿದರು.
ಸ್ವಚ್ಛ ಸಂಕೀರ್ಣವಿಲ್ಲದ 63 ಗ್ರಾಮ ಪಂಚಾಯತ್ಗಳಲ್ಲಿ ಕನಿಷ್ಠ 1000 ಚದರ ಅಡಿ ವಿಸ್ತೀರ್ಣದ ತ್ಯಾಜ್ಯ ನಿರ್ವಹಣಾ ಘಟಕಗಳನ್ನು ನಿರ್ಮಿಸಲು ಕ್ರಿಯಾಯೋಜನೆ ರೂಪಿಸಬೇಕಾಗಿದೆ. ಈ ಕಾರ್ಯಕ್ಕಾಗಿ ತಾಲೂಕು ಪಂಚಾಯತ್ ಅನಿರ್ಬಂದಿತ ನಿಧಿ ಹಾಗೂ ಗ್ರಾಮ ಪಂಚಾಯತ್ ಅನುದಾನವನ್ನು ಬಳಸಿಕೊಳ್ಳುವಂತೆ ಸೂಚಿಸಿದರು.
ನೈರ್ಮಲ್ಯ ತ್ಯಾಜ್ಯ ನಿರ್ವಹಣೆಯ ಮೊದಲ ಹಂತದಲ್ಲಿ 92 ಗ್ರಾಮ ಪಂಚಾಯತ್ಗಳನ್ನು ಗುರುತಿಸಲಾಗಿದ್ದು, ಅವುಗಳಲ್ಲಿ 48 ಗ್ರಾಮ ಪಂಚಾಯತ್ಗಳು ತಕ್ಷಣ ತ್ಯಾಜ್ಯ ನಿರ್ವಹಣಾ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಹಾಗೂ ವಿತರಣೆ ಮೇಲೆ ಪರಿಶೀಲನೆ, ದಾಳಿ ನಡೆಸಿ ದಂಡ ವಿಧಿಸುವುದರ ಜೊತೆಗೆ ಪರ್ಯಾಯ ವಸ್ತುಗಳ ಬಳಕೆಯನ್ನು ಉತ್ತೇಜಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ದಂಡ ಸಂಗ್ರಹಣೆಗೆ ಗುರಿ ನಿಗದಿಪಡಿಸಿ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಜಯಲಕ್ಷ್ಮೀ ರಾಯಕೋಡ್, ಯೋಜನಾ ಅಧಿಕಾರಿ ಇ. ಜಯರಾಮ್, ಪರಿಸರ ಅಧಿಕಾರಿ ಮಹೇಶ್ವರಿ ಸಿಂಗ್, ಸ್ವಚ್ಛ ಭಾರತ್ ಮಿಷನ್ ಜಿಲ್ಲಾ ಸಮಾಲೋಚಕರು ಹಾಗೂ ಇತರರು ಭಾಗವಹಿಸಿದ್ದರು.





