ಉಡುಪಿ: ಇಲ್ಲಿನ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ವಿಡಿಯೋ ಪ್ರಕರಣದ ವಿಚಾರವಾಗಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ ಕಾಲೇಜಿನ ವಾಶ್‌ರೂಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ ವಿದ್ಯಾರ್ಥಿನಿಯ ವಿಡಿಯೋ ಮಾಡಿದ್ದರು ಎನ್ನಲಾದ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ.
ಜುಲೈ 18ರಂದು ಘಟನೆ ನಡೆದಿದ್ದು, ಘಟನೆ ಬೆಳಕಿಗೆ ಬಂದ ತಕ್ಷಣ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜಿನ ಪ್ರಾಚಾರ್ಯರು ಅಮಾನತು ಮಾಡಿದ್ದರು. ಪ್ರಕರಣ ಭಾರೀ ಸದ್ದು ಮಾಡಿದ್ದರಿಂದ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪೊಲೀಸರು ಜುಲೈ 26ರಂದು ಸುಮೊಟೋ ಪ್ರಕರಣವನ್ನು ದಾಖಲಿಸಿದ್ದರು. ಅದಾದ ಬಳಿಕ ತನಿಖಾಧಿಕಾರಿಯನ್ನು ಕೂಡ ಬದಲಾಯಿಸಿ, ಕುಂದಾಪುರ ಡಿವೈಎಸ್‌ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿತ್ತು.
ಇನ್ನು, ಈ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗವು ಕೂಡ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು. ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಉಡುಪಿಗೆ ಎರಡು ದಿನ ಭೇಟಿ ನೀಡಿ ತನಿಖೆ ನಡೆಸಿದ್ದರು. ಆದರೆ, ಪ್ರಕರಣವನ್ನು ಮುಚ್ಚಿಹಾಕಲು ಸರ್ಕಾರ ಹುನ್ನಾರ ನಡೆಸುತ್ತಿದೆ. ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಜೊತೆಗೆ ಪ್ರಕರಣವನ್ನು ಎಸ್‌ಐಟಿಗೆ ವಹಿಸುವಂತೆ ಬಿಜೆಪಿ ಹಾಗೂ ಸಂಘ ಪರಿವಾರದ ನಾಯಕರು ಸರ್ಕಾರವನ್ನು ಆಗ್ರಹಿಸಿದ್ದರು. ಇದರ ನಡುವೆಯೇ ರಾಜ್ಯ ಸರ್ಕಾರ ಸೋಮವಾರ ಮಹತ್ವದ ಆದೇಶ ಹೊರಡಿಸಿದ್ದು, ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿದೆ. ಈ ಹಿನ್ನೆಲೆ ಸಿಐಡಿ ಪೊಲೀಸ್ ತಂಡವು ಮಂಗಳವಾರ ಉಡುಪಿಗೆ ಆಗಮಿಸಿ, ಎಸ್‌ಪಿ ಹಾಗೂ ತನಿಖಾಧಿಕಾರಿ ಜೊತೆ ಚರ್ಚಿಸಿ ಎಲ್ಲ ದಾಖಲೆಗಳನ್ನು ಪಡೆದುಕೊಳ್ಳಲಿದೆ ಎಂದು ಹೇಳಲಾಗಿದೆ.