ಮಂಗಳೂರು: ನ. 28: ಕ್ಷೇತ್ರ ಪುನರ್ವಿಂಗಡಣೆ ಹಾಗೂ ಮಹಿಳಾ ಮೀಸಲಾತಿ ಜಾರಿಗೆ ಸಂಬಂಧಿಸಿದ ಪರಿಷ್ಕೃತ ಸಂವಿಧಾನ ತಿದ್ದುಪಡಿ ಮಸೂದೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿರುವುದನ್ನು ಕೇಂದ್ರ ಸಚಿವರು ಹಾಗೂ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯಾಧ್ಯಕ್ಷರಾದ ಎಚ್.ಡಿ. ಕುಮಾರಸ್ವಾಮಿ ಅವರು ಸ್ವಾಗತಿಸಿ, ಶ್ಲಾಘಿಸಿದ್ದಾರೆ.

ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಸಮಾನ ಅವಕಾಶ ಹಾಗೂ ಸೂಕ್ತ ಪ್ರಾತಿನಿಧ್ಯ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ಈ ನಿರ್ಧಾರ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ನಾಂದಿ ಹಾಡುವ ಕ್ರಾಂತಿಕಾರಿ ಮತ್ತು ಐತಿಹಾಸಿಕ ಹೆಜ್ಜೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಮಹಿಳೆಯರಿಗೆ ಶೇ. 33ರಷ್ಟು ರಾಜಕೀಯ ಮೀಸಲಾತಿ ಕಲ್ಪಿಸುವ ಉದ್ದೇಶದ ಈ ಕ್ರಮ ಮಹಿಳಾ ಸಬಲೀಕರಣದ ದಿಕ್ಕಿನಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ. ಕಳೆದ ಮೂರು ದಶಕಗಳಿಂದ ಮಹಿಳೆಯರು ರಾಜಕೀಯ ಕ್ಷೇತ್ರದಲ್ಲಿ ಸಮರ್ಪಕ ಪ್ರಾತಿನಿಧ್ಯ ಮತ್ತು ಮೀಸಲಾತಿಗಾಗಿ ನಿರಂತರವಾಗಿ ಒತ್ತಾಯಿಸುತ್ತಾ ಬಂದಿದ್ದಾರೆ. ಇದೀಗ ಅವರ ಬಹುದಿನಗಳ ಬೇಡಿಕೆಗೆ ಸ್ಪಂದಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿರುವುದು ಸ್ವಾಗತಾರ್ಹ ಎಂದು ಅವರು ಹೇಳಿದ್ದಾರೆ.

ಮಹಿಳಾ ಮೀಸಲಾತಿ ವಿಚಾರವನ್ನು ರಾಜಕೀಯ ಭಿನ್ನಾಭಿಪ್ರಾಯಗಳ ದೃಷ್ಟಿಯಿಂದ ನೋಡದೆ, ಮಹಿಳೆಯರ ಹಕ್ಕು, ಸಮಾನತೆ ಮತ್ತು ಪ್ರಜಾಪ್ರಭುತ್ವದ ಆಶಯಗಳ ದೃಷ್ಟಿಯಿಂದ ಪರಿಗಣಿಸಬೇಕು. ಈ ಮಸೂದೆ ಯಾವುದೇ ಒಂದು ರಾಜಕೀಯ ಪಕ್ಷಕ್ಕೆ ಸೀಮಿತವಾದ ಕಾರ್ಯಕ್ರಮವಲ್ಲ. ಬದಲಾಗಿ ದೇಶದ ಕೋಟ್ಯಂತರ ಮಹಿಳೆಯರ ಭವಿಷ್ಯ ಮತ್ತು ರಾಜಕೀಯ ಪಾಲ್ಗೊಳ್ಳುವಿಕೆಗೆ ಸಂಬಂಧಿಸಿದ ಮಹತ್ವದ ನಿರ್ಧಾರವಾಗಿದೆ. ಆದ್ದರಿಂದ ಎಲ್ಲಾ ರಾಜಕೀಯ ಪಕ್ಷಗಳು ಪಕ್ಷಾತೀತವಾಗಿ ಮಸೂದೆಯನ್ನು ಬೆಂಬಲಿಸಬೇಕು ಎಂದು ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಕಾಂಗ್ರೆಸ್ ಸೇರಿದಂತೆ ಯಾವುದೇ ವಿರೋಧ ಪಕ್ಷಗಳು ಮಹಿಳಾ ಮೀಸಲಾತಿ ವಿಚಾರದಲ್ಲಿ ವಿರೋಧ ವ್ಯಕ್ತಪಡಿಸುವುದು ಸೂಕ್ತವಲ್ಲ. ಮಹಿಳೆಯರಿಗೆ ರಾಜಕೀಯದಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವುದು ಇಂದಿನ ಕಾಲದ ಅಗತ್ಯವಾಗಿದೆ. ಸಂಸತ್ತಿನಲ್ಲಿ ಮಸೂದೆ ಅಂಗೀಕಾರಗೊಳ್ಳಲು ಅಗತ್ಯವಿರುವ ಮೂರನೇ ಎರಡರಷ್ಟು ಬಹುಮತ ದೊರೆಯುವಂತೆ ಎಲ್ಲಾ ಪಕ್ಷಗಳು ಸಹಕರಿಸಬೇಕು. ಮಹಿಳೆಯರ ರಾಜಕೀಯ ಸಬಲೀಕರಣಕ್ಕೆ ಪಕ್ಷ ರಾಜಕಾರಣ ಅಡ್ಡಿಯಾಗಬಾರದು ಎಂದು ಅವರು ಪ್ರತಿಪಾದಿಸಿದ್ದಾರೆ.

ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುವುದಿಲ್ಲ
ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ರಾಜಕೀಯವಾಗಿ ಅನ್ಯಾಯವಾಗಲಿದೆ ಎಂಬ ಆತಂಕ ಹಾಗೂ ಚರ್ಚೆಗಳ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಈ ವಿಚಾರದಲ್ಲಿ ಅನಗತ್ಯ ಆತಂಕ ಸೃಷ್ಟಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಕ್ಷೇತ್ರ ಪುನರ್ವಿಂಗಡಣೆಯ ಪ್ರಕ್ರಿಯೆಯೊಂದಿಗೆ ವಿಧಾನಸಭಾ ಕ್ಷೇತ್ರಗಳ ಸಂಖ್ಯೆಯನ್ನು ಶೇ. 50ರಷ್ಟು ಹೆಚ್ಚಿಸುವ ಪ್ರಸ್ತಾವನೆಯೂ ಇರುವುದರಿಂದ ದಕ್ಷಿಣ ಭಾರತದ ರಾಜ್ಯಗಳ ರಾಜಕೀಯ ಪ್ರಾತಿನಿಧ್ಯಕ್ಕೆ ಸಂಬಂಧಿಸಿದ ಆತಂಕಗಳನ್ನು ಸಮಗ್ರವಾಗಿ ಪರಿಶೀಲಿಸಬೇಕಾಗಿದೆ. ಕ್ಷೇತ್ರಗಳ ಸಂಖ್ಯೆಯೇ ಹೆಚ್ಚಾಗುವ ಪ್ರಸ್ತಾವನೆಯ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಲಿದೆ ಎಂಬ ವಾದದಲ್ಲಿ ಹುರುಳಿಲ್ಲ ಎಂಬುದು ಅವರ ಅಭಿಪ್ರಾಯವಾಗಿದೆ.
ದೇಶದ ಎಲ್ಲಾ ರಾಜ್ಯಗಳ ಹಿತಾಸಕ್ತಿ, ಪ್ರಾದೇಶಿಕ ಸಮತೋಲನ ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಗಮನದಲ್ಲಿಟ್ಟುಕೊಂಡು ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆ ನಡೆಯಬೇಕು. ಜನಸಂಖ್ಯೆ, ಪ್ರಾದೇಶಿಕ ಅಭಿವೃದ್ಧಿ, ರಾಜ್ಯಗಳ ಸಾಧನೆ ಮತ್ತು ರಾಜಕೀಯ ಪ್ರಾತಿನಿಧ್ಯದಂತಹ ವಿಚಾರಗಳನ್ನು ಸಮತೋಲನದಿಂದ ಪರಿಗಣಿಸಬೇಕು. ಮಹಿಳೆಯರಿಗೆ ಹೆಚ್ಚಿನ ರಾಜಕೀಯ ಪ್ರಾತಿನಿಧ್ಯ ದೊರೆಯುವುದರ ಜೊತೆಗೆ ದೇಶದ ಪ್ರತಿಯೊಂದು ರಾಜ್ಯಕ್ಕೂ ನ್ಯಾಯಯುತ ಅವಕಾಶ ಸಿಗುವಂತಾಗಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

KIOCL ಮತ್ತು NMPTಗೆ ಕೇಂದ್ರ ಸಚಿವರ ಭೇಟಿ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ವಿಮಾನ ನಿಲ್ದಾಣದಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಆತ್ಮೀಯವಾಗಿ ಸ್ವಾಗತಿಸಿದರು.
ಬಳಿಕ ಅವರು ಕರಾವಳಿ ಕರ್ನಾಟಕದ ಕೈಗಾರಿಕಾ ಮತ್ತು ಆರ್ಥಿಕ ಅಭಿವೃದ್ಧಿಯ ದೃಷ್ಟಿಯಿಂದ ಮಹತ್ವ ಹೊಂದಿರುವ ಕುದುರೆಮುಖ ಕಬ್ಬಿಣದ ಅದಿರು ಕಂಪನಿ ನಿಯಮಿತ (KIOCL) ಹಾಗೂ ನವ ಮಂಗಳೂರು ಬಂದರು ಪ್ರಾಧಿಕಾರಕ್ಕೆ (NMPT) ಭೇಟಿ ನೀಡಿ, ಸಂಸ್ಥೆಗಳ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಸಂಸ್ಥೆಗಳ ಪ್ರಸ್ತುತ ಸ್ಥಿತಿಗತಿ, ಕೈಗಾರಿಕಾ ಚಟುವಟಿಕೆಗಳು, ಉತ್ಪಾದನಾ ಸಾಮರ್ಥ್ಯ, ಅಭಿವೃದ್ಧಿ ಯೋಜನೆಗಳು ಹಾಗೂ ಭವಿಷ್ಯದ ಸಾಧ್ಯತೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಕೈಗಾರಿಕಾ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಕರಾವಳಿ ಪ್ರದೇಶದ ಆರ್ಥಿಕ ಪ್ರಗತಿಯಲ್ಲಿ KIOCL ಹಾಗೂ NMPT ಪ್ರಮುಖ ಪಾತ್ರ ವಹಿಸುತ್ತಿವೆ. ಈ ಸಂಸ್ಥೆಗಳ ಕಾರ್ಯಕ್ಷಮತೆ ಹೆಚ್ಚಿಸುವುದು, ಆಧುನಿಕ ತಂತ್ರಜ್ಞಾನ ಅಳವಡಿಕೆ ಹಾಗೂ ಅಭಿವೃದ್ಧಿ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡುವುದರಿಂದ ಸ್ಥಳೀಯ ಯುವಜನರಿಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ಅಲ್ಲದೆ, ಜಿಲ್ಲೆಯ ಕೈಗಾರಿಕಾ ಬೆಳವಣಿಗೆ ಮತ್ತು ಆರ್ಥಿಕ ಚಟುವಟಿಕೆಗಳಿಗೆ ಹೆಚ್ಚಿನ ಬಲ ದೊರೆಯಲಿದೆ ಎಂಬ ಆಶಯವನ್ನು ಅವರು ವ್ಯಕ್ತಪಡಿಸಿದರು.
ಕರಾವಳಿ ಕರ್ನಾಟಕದಲ್ಲಿ ಕೈಗಾರಿಕಾ ಹೂಡಿಕೆ, ಉದ್ಯೋಗಾವಕಾಶ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ. ಸಾರ್ವಜನಿಕ ವಲಯದ ಸಂಸ್ಥೆಗಳು ಮತ್ತಷ್ಟು ಬಲಿಷ್ಠವಾಗಿ ಕಾರ್ಯನಿರ್ವಹಿಸುವ ಮೂಲಕ ಸ್ಥಳೀಯ ಆರ್ಥಿಕತೆಗೆ ಕೊಡುಗೆ ನೀಡಬೇಕು ಎಂಬ ಆಶಯ ಈ ಭೇಟಿಯ ಸಂದರ್ಭದಲ್ಲಿ ವ್ಯಕ್ತವಾಯಿತು.
ಜೆಡಿಎಸ್ ಮುಖಂಡರಿಂದ ಅದ್ದೂರಿ ಸ್ವಾಗತ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಮಂಗಳೂರು ಭೇಟಿಯ ಸಂದರ್ಭದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜೆಡಿಎಸ್ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಅವರಿಗೆ ಆತ್ಮೀಯ ಸ್ವಾಗತ ಕೋರಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಬ್ರಿಜೇಶ್ ಚೌಟ, ವಿಧಾನಸಭಾ ಸದಸ್ಯರಾದ ಡಾ. ಭರತ್ ಶೆಟ್ಟಿ ಮತ್ತು ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ, ಮಾಜಿ ಶಾಸಕರಾದ ಮೊಹಿದ್ದೀನ್ ಬಾವ, ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಜಾಕೆ ಮಾಧವ ಗೌಡ, ಉಡುಪಿ ಜಿಲ್ಲಾಧ್ಯಕ್ಷರಾದ ಕಾಪು ಯೋಗಿಶ್ ಶೆಟ್ಟಿ ಬಾಲಾಜಿ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಾಧ್ಯಕ್ಷರಾದ ಇಕ್ಬಾಲ್ ಮುಲ್ಕಿ, ವಸಂತ್ ಪೂಜಾರಿ, ಶಶಿರಾಜ್ ಶೆಟ್ಟಿ ಕೊಳಂಬೆ, ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್. ಧನ್ರಾಜ್, ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು, ಜಿಲ್ಲಾ ಯುವ ಘಟಕದ ಅಧ್ಯಕ್ಷ ಅಕ್ಷಿತ್ ಸುವರ್ಣ, ಮೀನುಗಾರ ಘಟಕದ ರಾಜ್ಯಾಧ್ಯಕ್ಷ ರತ್ನಾಕರ್ ಸುವರ್ಣ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ರಮೀಝಾ ನಾಸೀರ್, ನಾಝೀರ್ ಸಾಮಾನಿಗೆ, ಯುವ ಘಟಕದ ಮುಖಂಡರಾದ ರತೀಶ್ ಕರ್ಕೇರ, ರತೀಶ್ ರೈ, ವಿನ್ಸ್ಂಟ್ ಡಿಸೋಜ , ಕನಕದಾಸ್ ಕೂಳೂರು ,ಜಯಂತ್, ಜಾವೀದ್ ಸಲೀಂ, ಉಡುಪಿ ಜಿಲ್ಲಾ ಕಾರ್ಯಾಧ್ಯಕ್ಷ ವಾಸುದೇವ ರಾವ್, ಹೆಬ್ರಿ ತಾಲೂಕು ಅಧ್ಯಕ್ಷ ಶ್ರೀಕಾಂತ್ ಪೂಜಾರಿ ಕುಚ್ಚೂರು ಸೇರಿದಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಮಹಿಳಾ ಸಬಲೀಕರಣ, ಪ್ರಜಾಪ್ರಭುತ್ವದ ಬಲವರ್ಧನೆ, ಕ್ಷೇತ್ರ ಪುನರ್ವಿಂಗಡಣೆಯಲ್ಲಿ ಪ್ರಾದೇಶಿಕ ಸಮತೋಲನ ಹಾಗೂ ಕರಾವಳಿ ಕರ್ನಾಟಕದ ಕೈಗಾರಿಕಾ ಅಭಿವೃದ್ಧಿ ಇವು ದೇಶದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ ವಿಚಾರಗಳಾಗಿವೆ. ಈ ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿಗೆ ಪೂರಕವಾದ ಕ್ರಮಗಳನ್ನು ಕೈಗೊಳ್ಳುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

