ಮಂಗಳೂರು: ಸಹಕಾರಿ, ಸಾಮಾಜಿಕ, ಧಾರ್ಮಿಕ ಹಾಗೂ ಸಾಹಿತ್ಯಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ತುಳುನಾಡಿನ ಭಾಷೆ, ಕಲೆ, ಸಂಸ್ಕೃತಿ ಮತ್ತು ಪರಂಪರೆಯ ಸಂವರ್ಧನೆಗೆ ನಿರಂತರವಾಗಿ ಶ್ರಮಿಸುತ್ತಿರುವ ಶ್ರೀ ಗೋಕರ್ಣನಾಥೇಶ್ವರ ಕೋ-ಆಪರೇಟಿವ್ ಬ್ಯಾಂಕ್ನ ನಿರ್ದೇಶಕಿ ಹಾಗೂ ತುಳು ಕೂಟ ಕುಡ್ಲದ ಅಧ್ಯಕ್ಷೆ ಶ್ರೀಮತಿ ಹೇಮಾ ದಾಮೋದರ ನಿಸರ್ಗ ಅವರಿಗೆ ‘ತೌಳವ ಸಹಕಾರಿ ಸಾಧಕಿ ಪ್ರಶಸ್ತಿ–2026’ ಪ್ರದಾನ ಮಾಡಿ ಗೌರವಿಸಲಾಯಿತು.
ತುಳುನಾಡ ರಕ್ಷಣಾ ವೇದಿಕೆ (ರಿ.) ಹಾಗೂ ತುಳುನಾಡ ಸೂರ್ಯ ಪತ್ರಿಕೆಯ ವತಿಯಿಂದ 73ನೇ ಅಖಿಲ ಭಾರತ ಸಹಕಾರ ಸಪ್ತಾಹ–2026ರ ಅಂಗವಾಗಿ ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಗಣ್ಯರ ಸಮ್ಮುಖದಲ್ಲಿ ಈ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಶ್ರೀ ಗೋಕರ್ಣನಾಥೇಶ್ವರ ಕೋ-ಆಪರೇಟಿವ್ ಬ್ಯಾಂಕ್ನಲ್ಲಿ ಕಳೆದ ಐದು ವರ್ಷಗಳಿಂದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಹೇಮಾ ದಾಮೋದರ ನಿಸರ್ಗ ಅವರು ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ. ಅವರ ಪತಿ ಶ್ರೀ ದಾಮೋದರ ನಿಸರ್ಗ ಅವರು ಇದೇ ಬ್ಯಾಂಕ್ನ ಅಧ್ಯಕ್ಷರಾಗಿ ಸತತ 15 ವರ್ಷಗಳ ಕಾಲ ಸಲ್ಲಿಸಿರುವ ಸೇವೆಯೂ ಸಹಕಾರಿ ಕ್ಷೇತ್ರದಲ್ಲಿ ಗಮನಾರ್ಹವಾಗಿದೆ.
ತುಳು ಭಾಷೆ, ಕಲೆ ಮತ್ತು ಸಂಸ್ಕೃತಿಯ ಪ್ರಚಾರ ಹಾಗೂ ಸಂರಕ್ಷಣೆಯಲ್ಲಿ ವಿಶೇಷ ಆಸಕ್ತಿ ಹೊಂದಿರುವ ಹೇಮಾ ಅವರು ತುಳು ಕೂಟ ಕುಡ್ಲದ ಅಧ್ಯಕ್ಷೆಯಾಗಿ ಹಲವು ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ. ತುಳು ಕೂಟದ 50ನೇ ವರ್ಷದ ಸುವರ್ಣ ಸಂಭ್ರಮದ ಅಂಗವಾಗಿ ಮಂಗಳೂರಿನ ಪುರಭವನದಲ್ಲಿ ‘ಬಂಗಾರ ಪರ್ಬ’ ಎಂಬ ಅದ್ದೂರಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ತಮ್ಮ ಸಂಘಟನಾ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ತುಳುನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಅವರ ಪ್ರಯತ್ನಗಳು ಪ್ರಶಂಸನೀಯವಾಗಿವೆ.
ಮೂಡುಬಿದಿರೆ ಜೈನಕಾಶಿಯ ಶ್ರೀ ದಿಗಂಬರ ಜೈನ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಡಿ.ಕೆ. ಗ್ರೂಪ್ ಆಫ್ ಕಂಪನೀಸ್ನ ಸಂಸ್ಥಾಪಕರು ಹಾಗೂ ಡಿ.ಕೆ. ಬಿಸಿನೆಸ್ ಆ್ಯಂಡ್ ಟೆಕ್ನಾಲಜಿ ಅಡ್ವೈಸರ್ಸ್ ಪ್ರೈವೇಟ್ ಲಿಮಿಟೆಡ್ನ ಆಡಳಿತ ನಿರ್ದೇಶಕರಾದ ಆಲ್ವಿನ್ ಜೋಯೆಲ್ ನೊರೊನ್ಹಾ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಮಡೂರು ಶ್ರೀ ಶಿವದುರ್ಗಾಂಬಾ ಮಠದ ಶಿವಯೋಗಿ ದುರ್ಗಾನಂದ ಸ್ವಾಮೀಜಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ. ಪಿ.ಎಲ್. ಧರ್ಮ, ಅದಾನಿ ಗ್ರೂಪ್ನ ಅಧ್ಯಕ್ಷರು ಹಾಗೂ ನಿರ್ದೇಶಕರಾದ ಕಿಶೋರ್ ಆಳ್ವ, ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿ, ಕಿರಣ್ ಬುಡ್ಲೆಗುತ್ತು, ತುಳು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್. ಧನರಾಜ್, ದಾಸ್ ಪ್ರೋಮೋಷನ್ ಕೇರ್ ಟ್ರಸ್ಟ್ನ ಸ್ಥಾಪಕ ಅನಿಲ್ ದಾಸ್, ಗೋವಿಂದದಾಸ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಆಶಾಲತಾ ಪಿ. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ, ಸುರೇಂದ್ರ ಪೂಜಾರಿ ಹಾವಂಜೆ, ನಾಗಲಕ್ಷ್ಮಿ ಸುಬ್ರಹ್ಮಣ್ಯ ನಗರ, ಜಯ ಪೂಜಾರಿ ಲಕ್ಷ್ಮಿನಗರ ಸೇರಿದಂತೆ ಸಂಘಟನೆಯ ವಿವಿಧ ಪದಾಧಿಕಾರಿಗಳು, ಸಹಕಾರಿ ಕ್ಷೇತ್ರದ ಗಣ್ಯರು ಹಾಗೂ ಸಮಾಜದ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ತುಳುನಾಡ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಹಕಾರಿ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ವಿವಿಧ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಹಕಾರಿ ಕ್ಷೇತ್ರದ ಸೇವೆಯೊಂದಿಗೆ ತುಳು ಭಾಷೆ, ಸಂಸ್ಕೃತಿ ಮತ್ತು ಸಮಾಜಮುಖಿ ಚಟುವಟಿಕೆಗಳಲ್ಲಿಯೂ ಗುರುತಿಸಿಕೊಂಡಿರುವ ಶ್ರೀಮತಿ ಹೇಮಾ ದಾಮೋದರ ನಿಸರ್ಗ ಅವರ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

