ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಬುಧವಾರ ಸಭೆ ನಡೆಸಲಿದ್ದಾರೆ.
ಮಾರ್ಚ್ 17ರಂದು ಮಧ್ಯಾಹ್ನ 12:30ಕ್ಕೆ ವರ್ಚುವಲ್ ಸಭೆ ನಡೆಯಲಿದೆ. ಈ ಸಭೆಯಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆಯಾ ರಾಜ್ಯಗಳಲ್ಲಿ ಕೈಗೊಂಡ ಕ್ರಮಗಳು, ಇನ್ನು ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗುತ್ತದೆ. ಭಾರತದಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಬರುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದೆ. ಕೊರೊನಾ ಪ್ರಕರಣಗಳ ಕೇಂದ್ರಬಿಂದುವೆಂದೇ ಪರಿಗಣಿಸಲ್ಪಟ್ಟಿರುವ ಮಹಾರಾಷ್ಟ್ರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಅಧಿಕವಾಗಿದೆ.
ದೇಶದಲ್ಲಿ ಈವರೆಗೆ ಒಟ್ಟು 1,13,85,339 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,58,725 ಮಂದಿ ಸಾವಿಗೀಡಾಗಿದ್ದಾರೆ.