ಮಂಗಳೂರು, ಜುಲೈ 11: ಜನತಾದಳ (ಜಾತ್ಯತೀತ) ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಪ್ರಕಾಶ್ ಶೆಟ್ಟಿ ಅಸೈಗೋಳಿ ಅವರನ್ನು ಮಂಗಳೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ ತಿಳಿಸಿದ್ದಾರೆ.

ಉಳ್ಳಾಲ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ನೇಮಕಾತಿಯನ್ನು ಅಧಿಕೃತವಾಗಿ ಘೋಷಿಸಿದ ಅವರು, ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಕ್ಕೆ ಹೊಸ ಚೈತನ್ಯ ತುಂಬುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಪ್ರಕಾಶ್ ಶೆಟ್ಟಿ ಅಸೈಗೋಳಿ ಅವರು ವಿದ್ಯಾರ್ಥಿ ಜೀವನದಿಂದಲೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡಿದ್ದು, ಸರ್ಕಾರಿ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಬಳಿಕ ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ಮಂಗಳೂರು ತಾಲೂಕು ಪಂಚಾಯತ್ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿ ಜನಪರ ಆಡಳಿತ ಮತ್ತು ಸಂಘಟನಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಪಕ್ಷದ ಮೇಲಿನ ನಿಷ್ಠೆ, ಸಂಘಟನಾ ಸಾಮರ್ಥ್ಯ, ಆಡಳಿತ ಅನುಭವ ಹಾಗೂ ಜನಸಂಪರ್ಕವನ್ನು ಪರಿಗಣಿಸಿ ಅವರಿಗೆ ಈ ಮಹತ್ವದ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದು ಜಾಕೆ ಮಾಧವ ಗೌಡ ಹೇಳಿದರು.
ಮಂಗಳೂರು ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ವಾರ್ಡ್ ಹಾಗೂ ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಸದೃಢಗೊಳಿಸುವುದು, ಯುವಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದತ್ತ ಸೆಳೆಯುವುದು, ಹೊಸ ಸದಸ್ಯತ್ವ ಅಭಿಯಾನವನ್ನು ಪರಿಣಾಮಕಾರಿಯಾಗಿ ನಡೆಸುವುದು ಹಾಗೂ ಪಕ್ಷದ ತತ್ವ-ಸಿದ್ಧಾಂತಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮೂಲಕ ಮುಂಬರುವ ಗ್ರಾಮ ಪಂಚಾಯತ್, ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸುವಲ್ಲಿ ಪ್ರಕಾಶ್ ಶೆಟ್ಟಿ ಅಸೈಗೋಳಿ ಯಶಸ್ವಿಯಾಗಲಿದ್ದಾರೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ನೇಮಕಾತಿಯನ್ನು ಸ್ವೀಕರಿಸಿ ಮಾತನಾಡಿದ ಪ್ರಕಾಶ್ ಶೆಟ್ಟಿ ಅಸೈಗೋಳಿ, ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು, ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ ಹಾಗೂ ಹಿರಿಯ ಮುಖಂಡರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದರು.

“ಮಂಗಳೂರು ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ವಾರ್ಡ್ ಮತ್ತು ಬೂತ್ ಮಟ್ಟದಲ್ಲಿ ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಹಿರಿಯರು, ಯುವ ಮುಖಂಡರು ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ಜನತಾದಳ (ಜಾತ್ಯತೀತ) ಪಕ್ಷವನ್ನು ಕ್ಷೇತ್ರದಲ್ಲಿ ಅಗ್ರಗಣ್ಯ ರಾಜಕೀಯ ಶಕ್ತಿಯನ್ನಾಗಿ ರೂಪಿಸಲು ಬದ್ಧನಾಗಿದ್ದೇನೆ” ಎಂದು ಹೇಳಿದರು.

ಜಿಲ್ಲಾ ಕಾರ್ಯಾಧ್ಯಕ್ಷ ಇಕ್ಬಲ್ ಮುಲ್ಕಿ ಸ್ವಾಗತಿಸಿ, ಪ್ರಕಾಶ್ ಶೆಟ್ಟಿ ಅಸೈಗೋಳಿ ಅವರ ನೇಮಕಾತಿಯಿಂದ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಸಂಘಟನೆಗೆ ಹೊಸ ಶಕ್ತಿ ದೊರೆಯಲಿದ್ದು, ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಲಿದೆ ಎಂದು ಹೇಳಿದರು.
ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯ ಹೈದರ್ ಪರ್ತಿಪಾಡಿ ಮಾತನಾಡಿ, ಪಕ್ಷದ ಬೆಳವಣಿಗೆಯಲ್ಲಿ ಪ್ರಕಾಶ್ ಶೆಟ್ಟಿ ಅಸೈಗೋಳಿ ಅವರ ತಂದೆ ದಿವಂಗತ ವೆಂಕಪ್ಪ ಶೆಟ್ಟಿ ಅವರ ಸಮಾಜಮುಖಿ ಸೇವೆ ಹಾಗೂ ಪಕ್ಷಕ್ಕಾಗಿ ಸಲ್ಲಿಸಿದ ಕೊಡುಗೆಯನ್ನು ಸ್ಮರಿಸಿ, ಆ ಸೇವಾ ಪರಂಪರೆಯನ್ನು ಪ್ರಕಾಶ್ ಶೆಟ್ಟಿ ಮುಂದುವರಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲಾ ಕಾರ್ಯಾಧ್ಯಕ್ಷ ವಸಂತ್ ಪೂಜಾರಿ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೆಡಿಎಸ್ ಸಂಘಟನೆ ವೇಗವಾಗಿ ಬೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ಹಲವು ಗಣ್ಯರು ಹಾಗೂ ವಿವಿಧ ಕ್ಷೇತ್ರಗಳ ಪ್ರಮುಖರು ಪಕ್ಷವನ್ನು ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು ವಂದನಾರ್ಪಣೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಯುವ ಘಟಕದ ಜಿಲ್ಲಾ ಅಧ್ಯಕ್ಷ ಅಕ್ಷಿತ್ ಸುವರ್ಣ, ಮೀನುಗಾರ ಘಟಕದ ರಾಜ್ಯಾಧ್ಯಕ್ಷ ರತ್ನಾಕರ್ ಸುವರ್ಣ, ವಿದ್ಯಾರ್ಥಿ ಜನತಾದಳ ಜಿಲ್ಲಾದ್ಯಕ್ಷ ನಿಹಾಲ್ ಕೋಡ್ತುಗುಳಿ, ಜೆಡಿಎಸ್ ಮುಖಂಡರಾದ ಗಂಗಾಧರ್ ಉಳ್ಳಾಲ್ , ಅಂಜನ್ ಮೂರ್ಜೆ ಸೇರಿದಂತೆ ಪಕ್ಷದ ಹಲವು ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

