ಸಾಲಿಗ್ರಾಮ, ಅ. 25: ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ 8ನೇ ಮಹಡಿಯಿಂದ ಬಿದ್ದು 18 ವರ್ಷದ ಯುವ ಕಾರ್ಮಿಕ ಮೃತಪಟ್ಟಿರುವ ದಾರುಣ ಘಟನೆಗೆ ತುಳುನಾಡ ರಕ್ಷಣಾ ವೇದಿಕೆ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಮೃತ ಕಾರ್ಮಿಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಘಟನೆಗೆ ಕಾರಣರಾದವರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ಆಗ್ರಹಿಸಿದ್ದಾರೆ.
ಪಶ್ಚಿಮ ಬಂಗಾಳದ ಮಾಲ್ದಾ ಜಿಲ್ಲೆಯ ದೇಬಾಶಿಶ್ ದಾಸ್ (18) ಮೃತಪಟ್ಟ ಕಾರ್ಮಿಕ. ಕಳೆದ ಎರಡು ತಿಂಗಳಿನಿಂದ ಸಾಲಿಗ್ರಾಮದ ನಿರ್ಮಾಣ ಹಂತದ ಕಟ್ಟಡದಲ್ಲಿ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಈತ, ಅಕ್ಟೋಬರ್ 24ರಂದು ಮಧ್ಯಾಹ್ನ ಸುಮಾರು 2.30ರ ವೇಳೆಗೆ ಕಟ್ಟಡದ 8ನೇ ಮಹಡಿಯ ಪ್ಲಂಬಿಂಗ್ ಡಕ್ಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾನೆ. ತಲೆಗೆ ಗಂಭೀರ ಗಾಯಗೊಂಡಿದ್ದ ಆತನನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷಿಸಿದ ವೈದ್ಯರು ಆತ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಸುರಕ್ಷತಾ ಕ್ರಮಗಳ ನಿರ್ಲಕ್ಷ್ಯದ ಆರೋಪ
ಎತ್ತರದ ಕಟ್ಟಡಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಸುರಕ್ಷತಾ ಬೆಲ್ಟ್, ಸುರಕ್ಷತಾ ಬಲೆ, ಹೆಲ್ಮೆಟ್ ಸೇರಿದಂತೆ ಅಗತ್ಯ ಸುರಕ್ಷತಾ ಪರಿಕರಗಳನ್ನು ಒದಗಿಸದೆ, ಸೂಕ್ತ ಮುಂಜಾಗ್ರತಾ ಕ್ರಮಗಳನ್ನೂ ಕೈಗೊಳ್ಳದೆ ಕೆಲಸ ಮಾಡಿಸಲಾಗಿದೆ ಎಂದು ಮೃತ ಕಾರ್ಮಿಕನ ಸಂಬಂಧಿ ಉತ್ಪಲ್ ಮಂಡಲ್ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.
ಈ ಸಂಬಂಧ ಕಟ್ಟಡದ ಲೇಬರ್ ಗುತ್ತಿಗೆದಾರ ಕರುಣಾಕರ ಎಸ್. ಕೋಟ್ಯಾನ್, ಸೈಟ್ ಇಂಜಿನಿಯರ್ ರಾಘವೇಂದ್ರ ಸೋಮಯಾಜಿ, ಮೇಸ್ತ್ರಿ ಶರತ್ ಹಾಗೂ ಕಟ್ಟಡದ ಮಾಲೀಕರ ವಿರುದ್ಧ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದ ಆರೋಪ ಮಾಡಲಾಗಿದೆ.

ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 162/2026ರಂತೆ ಭಾರತೀಯ ನ್ಯಾಯ ಸಂಹಿತೆಯ ಕಲಂ 290 ಮತ್ತು 106ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಕಾರ್ಮಿಕರ ಸುರಕ್ಷತೆಯಲ್ಲಿ ನಿರ್ಲಕ್ಷ್ಯ ಸಲ್ಲದು
ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ದುಡಿಯುವ ಕಾರ್ಮಿಕರ ಜೀವಕ್ಕೆ ರಕ್ಷಣೆ ಒದಗಿಸುವುದು ಗುತ್ತಿಗೆದಾರರು, ಕಟ್ಟಡ ಮಾಲೀಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಕುಟುಂಬದ ಜೀವನಾಧಾರಕ್ಕಾಗಿ ದುಡಿಯುತ್ತಿದ್ದ ಯುವ ಕಾರ್ಮಿಕನ ಸಾವು ಅತ್ಯಂತ ನೋವಿನ ಸಂಗತಿಯಾಗಿದೆ. ಇಂತಹ ದುರಂತಗಳು ಮರುಕಳಿಸದಂತೆ ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕಾರ್ಮಿಕರಿಗೆ ಅಗತ್ಯ ಸುರಕ್ಷತಾ ಪರಿಕರಗಳನ್ನು ಒದಗಿಸುವುದರ ಜೊತೆಗೆ, ನಿಯಮಿತ ಸುರಕ್ಷತಾ ಪರಿಶೀಲನೆ ನಡೆಸಬೇಕು ಎಂದು ತುಳುನಾಡ ರಕ್ಷಣಾ ವೇದಿಕೆ ಒತ್ತಾಯಿಸಿದೆ.
ಪರಿಹಾರ ನೀಡಲು ವಿಳಂಬವಾದರೆ ರಾಜ್ಯಮಟ್ಟದ ಪ್ರತಿಭಟನೆ
ಮೃತ ಯುವ ಕಾರ್ಮಿಕನ ಕುಟುಂಬಕ್ಕೆ ನ್ಯಾಯ ದೊರಕಿಸುವುದು ಮತ್ತು ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸುವುದು ತುರ್ತು ಅಗತ್ಯವಾಗಿದೆ. ಸಂಬಂಧಪಟ್ಟವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಪರಿಹಾರ ನೀಡುವ ಪ್ರಕ್ರಿಯೆಯನ್ನು ವಿಳಂಬವಿಲ್ಲದೆ ಕೈಗೊಳ್ಳಬೇಕು. ಅಲ್ಲದೆ, ಘಟನೆಯ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರೆಂದು ಸಾಬೀತಾಗುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ಆಗ್ರಹಿಸಿದ್ದಾರೆ.
ಮೃತ ಕಾರ್ಮಿಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಲ್ಲಿ ಹಾಗೂ ನ್ಯಾಯ ಒದಗಿಸುವಲ್ಲಿ ವಿಳಂಬ ನೀತಿ ಅನುಸರಿಸಿದರೆ, ತುಳುನಾಡ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ಅವರ ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆಸುವುದು ಅನಿವಾರ್ಯವಾಗಲಿದೆ ಎಂದು ಫ್ರ್ಯಾಂಕಿ ಡಿಸೋಜ ಎಚ್ಚರಿಕೆ ನೀಡಿದ್ದಾರೆ.
ಕಾರ್ಮಿಕರ ಜೀವ ಮತ್ತು ಸುರಕ್ಷತೆಯನ್ನು ಕಡೆಗಣಿಸುವ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ. ಮೃತ ಕಾರ್ಮಿಕನ ಕುಟುಂಬಕ್ಕೆ ನ್ಯಾಯ ದೊರಕುವವರೆಗೆ ತುಳುನಾಡ ರಕ್ಷಣಾ ವೇದಿಕೆ ಹೋರಾಟ ನಡೆಸಲಿದೆ ಎಂದು ಅವರು ತಿಳಿಸಿದ್ದಾರೆ.

