ಬಂಟ್ವಾಳ, ಜುಲೈ 18: ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ನಲ್ಲಿ ನಡೆದ ಯುವತಿ ಲಾವಣ್ಯ ಅವರ ಅಮಾನುಷ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ, ಜನತಾದಳ (ಜಾತ್ಯತೀತ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಅವರ ನಿರ್ದೇಶನದ ಮೇರೆಗೆ ಜೆಡಿಎಸ್ ನಿಯೋಗವು ಮೃತೆಯ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ದುಃಖದಲ್ಲಿ ಭಾಗಿಯಾಯಿತು.
ಬಳಿಕ ನಿಯೋಗವು ಬಂಟ್ವಾಳ ಪೊಲೀಸ್ ಠಾಣೆಗೆ ತೆರಳಿ ಪೊಲೀಸ್ ನಿರೀಕ್ಷಕರಿಗೆ ಮನವಿ ಸಲ್ಲಿಸಿತು. ಈ ವೇಳೆ ಮಾತನಾಡಿದ ಜೆಡಿಎಸ್ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಶೆಟ್ಟಿ ಜಪ್ಪು, ಲಾವಣ್ಯ ಹತ್ಯೆ ಪ್ರಕರಣವು ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿರುವ ಅಮಾನವೀಯ ಕೃತ್ಯವಾಗಿದ್ದು, ಆರೋಪಿಯ ವಿರುದ್ಧ ಯಾವುದೇ ರೀತಿಯ ಒತ್ತಡಗಳಿಗೆ ಮಣಿಯದೆ ಸಂಪೂರ್ಣ ಪಾರದರ್ಶಕ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ವೈಜ್ಞಾನಿಕ ಸಾಕ್ಷ್ಯಾಧಾರಗಳನ್ನು ಸಮರ್ಪಕವಾಗಿ ಸಂಗ್ರಹಿಸಿ, ಶೀಘ್ರದಲ್ಲಿಯೇ ಬಲಿಷ್ಠ ದೋಷಾರೋಪಣಾ ಪತ್ರ (ಚಾರ್ಜ್ಶೀಟ್) ಸಲ್ಲಿಸಿ, ನ್ಯಾಯಾಲಯದಲ್ಲಿ ಸಮರ್ಥವಾಗಿ ಪ್ರಕರಣ ಮಂಡಿಸುವ ಮೂಲಕ ಆರೋಪಿಗೆ ಕಾನೂನಿನ ಪ್ರಕಾರ ಅತ್ಯಂತ ಕಠಿಣ ಶಿಕ್ಷೆ ವಿಧಿಸುವಂತೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಮೃತ ಲಾವಣ್ಯ ಅವರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಆರ್ಥಿಕ ಪರಿಹಾರ, ಅಗತ್ಯ ನೆರವು ಹಾಗೂ ಪುನರ್ವಸತಿ ಸೌಲಭ್ಯಗಳನ್ನು ಕಲ್ಪಿಸಲು ಸಂಬಂಧಪಟ್ಟ ಇಲಾಖೆಗೆ ಶಿಫಾರಸು ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ, ಮಹಿಳೆಯರ ವಿರುದ್ಧದ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸ್ ಗಸ್ತು ಹೆಚ್ಚಿಸುವುದು, ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಹಾಗೂ ನಿಗಾ ವ್ಯವಸ್ಥೆಯನ್ನು ಬಲಪಡಿಸುವುದು, ರಾತ್ರಿ ವೇಳೆ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಮೂಲಕ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸಬೇಕೆಂದು ಆಗ್ರಹಿಸಿದರು.

ಇದೇ ವೇಳೆ, ಲಾವಣ್ಯ ಅವರ ತಂದೆಯವರು ತಮ್ಮ ಪುತ್ರಿಯ ಹತ್ಯೆ ಪ್ರಕರಣದ ಆರೋಪಿಯ ಪರವಾಗಿ ಯಾವುದೇ ವಕೀಲರು ವಕಾಲತ್ತು ವಹಿಸಬಾರದು ಎಂದು ಕೋರಿ, ವಕೀಲರ ಸಂಘದ ಮಾಜಿ ಅಧ್ಯಕ್ಷ ಉಮೇಶ್ ಕುಮಾರ್ ವೈ. ಗೌಡ ಅವರ ಮೂಲಕ ವಕೀಲರ ಸಂಘಕ್ಕೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಾಧ್ಯಕ್ಷ ಇಕ್ಬಲ್ ಮುಲ್ಕಿ, ಮೀನುಗಾರ ಘಟಕದ ರಾಜ್ಯಾಧ್ಯಕ್ಷ ರತ್ನಾಕರ ಸುವರ್ಣ, ಜಾವೀದ್ ಸಲೀಂ, ನಜೀರ್ ಸಾಮಾಣಿಗೆ, ಇಬ್ರಾಹಿಂ ಜಪ್ಪು, ಪ್ರಶಾಂತ್ ಭಟ್ ಕಡಬ, ಆಶ್ಲೇಶ್ ಗೌಡ, ಕೃಷ್ಣಪ್ಪ ಗೌಡ ಉಳಿ, ರೋಹಿತ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು


