ಮಂಗಳೂರು, ಸೆ.20: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಇಬ್ಬರು ಮಕ್ಕಳನ್ನು ಮನೆಯ ಸಮೀಪದ ಬಾವಿಗೆ ಎಸೆದಿದ್ದಾರೆ ಎಂಬ ಆರೋಪ ದಕ್ಷಿಣ ಕನ್ನಡ ಜಿಲ್ಲೆಯ ಪೆರ್ನೆಯಲ್ಲಿ ನಡೆದಿದೆ. ಘಟನೆಯಲ್ಲಿ ಸುಮಾರು ಮೂರು ವರ್ಷದ ಮಗು ಮೃತಪಟ್ಟಿದ್ದು, ಮತ್ತೊಂದು ಮಗು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದೆ.
ಪೆರ್ನೆ ನಿವಾಸಿಗಳಾದ ಸಿನಾನ್ (32) ಮತ್ತು ನೂರುನ್ನಿಸಾ (28) ದಂಪತಿ ನಡುವೆ ವೈವಾಹಿಕ ವಿಚಾರಕ್ಕೆ ಸಂಬಂಧಿಸಿ ಫೋನ್ ಕರೆಯಲ್ಲಿ ಮಾತಿನ ಚಕಮಕಿ ನಡೆದಿತ್ತು ಎನ್ನಲಾಗಿದೆ. ಈ ಸಂದರ್ಭದಲ್ಲಿ ಕೋಪಗೊಂಡ ನೂರುನ್ನಿಸಾ, ಮನೆಯಲ್ಲಿದ್ದ ತನ್ನ ಸುಮಾರು ಮೂರುವರೆ ವರ್ಷದ ಮಗು ಹಾಗೂ ಪತಿಯ ತಂಗಿಯ ಸುಮಾರು ಮೂರು ವರ್ಷದ ಮಗುವನ್ನು ಮನೆಯ ಸಮೀಪದಲ್ಲಿದ್ದ ಬಾವಿಗೆ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ.
ಮಕ್ಕಳು ಬಾವಿಗೆ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ಇಬ್ಬರು ಮಕ್ಕಳನ್ನೂ ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಆದರೆ ಪತಿಯ ತಂಗಿಯ ಮಗು ಮೃತಪಟ್ಟಿರುವುದು ಬಳಿಕ ದೃಢಪಟ್ಟಿದೆ. ನೂರುನ್ನಿಸಾ ಅವರ ಮಗುವನ್ನು ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರಂ. 121/2026ರಂತೆ ಪ್ರಕರಣ ದಾಖಲಾಗಿದೆ. ಆರೋಪಿತ ನೂರುನ್ನಿಸಾಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಘಟನೆಗೆ ಕಾರಣವಾದ ನಿಖರ ಸಂದರ್ಭಗಳು, ಕೌಟುಂಬಿಕ ಕಲಹದ ಸ್ವರೂಪ ಹಾಗೂ ಮಕ್ಕಳನ್ನು ಬಾವಿಗೆ ಎಸೆಯಲಾಗಿದೆ ಎನ್ನಲಾದ ಆರೋಪದ ಕುರಿತಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ತನಿಖೆಯ ಬಳಿಕವೇ ಘಟನೆಯ ಸಂಪೂರ್ಣ ವಾಸ್ತವಾಂಶ ಸ್ಪಷ್ಟವಾಗಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

