ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ-169ರ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮಾಳ ಗೇಟ್ನಿಂದ ಕಾರ್ಕಳ ತನಕದ ದ್ವಿಪಥ ರಸ್ತೆಯನ್ನು ಚತುಷ್ಪಥಗೊಳಿಸಬೇಕೆಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭೇಟಿಯಾಗಿ ಮನವಿ ಸಲ್ಲಿಸಿದ್ದರು.
ಇದರ ಪರಿಣಾಮವಾಗಿ ಇಂದು (ಶುಕ್ರವಾರ) 15.27 ಕಿ.ಮೀ ಉದ್ದದ ರಸ್ತೆಯನ್ನು ಚತುಷ್ಪಥಿಕರಣಗೊಳಿಸಲು 177.84 ಕೋಟಿ ರೂಪಾಯಿಯನ್ನು ಬಿಡುಗಡೆಗೊಳಿಸಲು ರಾಷ್ಟ್ರೀಯ ಹೆದ್ದಾರಿ ಸಚಿವಾಲಯವು ಅನುಮೋದನೆಯನ್ನು ನೀಡಿದೆ ಎಂದು ತಿಳಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಭಾಗದ ಜನರಿಗೆ ಪ್ರಯಾಣಿಸಲು ಬಹಳ ತ್ರಾಸದಾಯಕವಾಗಿದ್ದ ಈ ಮಾರ್ಗವನ್ನು ಚತುಷ್ಪಥಿಕರಣಗೊಳಿಸಲು ಅನುಮೋದನೆ ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಸಚಿವೆ ಶೋಭಾ ಕರಂದ್ಲಾಜೆ ಧನ್ಯವಾದ ತಿಳಿಸಿದ್ದು, ಶೀಘ್ರವೇ ಟೆಂಡರ್ ಪ್ರಕ್ರಿಯೆ ಆರಂಭಗೊಳ್ಳಲಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಕಾಮಗಾರಿಯು ಆರಂಭಗೊಳ್ಳಲಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.