ಮಾಲೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಕಾರ್ಯವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಬೂತ್ ಮಟ್ಟದ ಏಜೆಂಟ್ಗಳ (BLA) ಕಾರ್ಯಾಗಾರವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉತ್ಸಾಹದಿಂದ ಭಾಗವಹಿಸಿದರು.

ಕಾರ್ಯಾಗಾರದ ಮುಖ್ಯ ಉದ್ದೇಶ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯನ್ನು ಸಮರ್ಪಕವಾಗಿ ಅರ್ಥಮಾಡಿಕೊಳ್ಳುವುದು ಹಾಗೂ ಚುನಾವಣಾ ಆಯೋಗದ ಮಾರ್ಗಸೂಚಿಗಳ ಅನುಸಾರ ಬೂತ್ ಮಟ್ಟದ ಏಜೆಂಟ್ಗಳು ನಿರ್ವಹಿಸಬೇಕಾದ ಜವಾಬ್ದಾರಿಗಳ ಕುರಿತು ಅರಿವು ಮೂಡಿಸುವುದಾಗಿತ್ತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಜೆಡಿಎಸ್ ಪಕ್ಷದ ರಾಜ್ಯ ವಕ್ತಾರರಾದ ಶ್ರೀ ದೇವರಾಜ್ ಅವರು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ವಿವಿಧ ಹಂತಗಳು, ಮತದಾರರ ಸೇರ್ಪಡೆ, ತಿದ್ದುಪಡಿ ಹಾಗೂ ಹೆಸರುಗಳ ಅಳವಡಿಕೆ ಕುರಿತಂತೆ ವಿವರವಾದ ಮಾಹಿತಿ ನೀಡಿದರು. ಜೊತೆಗೆ ಚುನಾವಣಾ ಆಯೋಗದ ನಿಯಮಾವಳಿಗಳನ್ನು ಪರಿಣಾಮಕಾರಿಯಾಗಿ ಪಾಲಿಸುವ ಮೂಲಕ ಮತದಾರರ ಪಟ್ಟಿಯನ್ನು ನಿಖರ ಮತ್ತು ಪಾರದರ್ಶಕವಾಗಿಡುವ ಅಗತ್ಯವನ್ನು ಒತ್ತಿ ಹೇಳಿದರು.

ಬೂತ್ ಮಟ್ಟದ ಏಜೆಂಟ್ಗಳು ಕ್ಷೇತ್ರದ ಪ್ರತಿಯೊಬ್ಬ ಅರ್ಹ ಮತದಾರರ ಮಾಹಿತಿಯನ್ನು ಪರಿಶೀಲಿಸಿ, ಯಾವುದೇ ತಪ್ಪುಗಳು ಅಥವಾ ಲೋಪದೋಷಗಳಿದ್ದಲ್ಲಿ ಅವುಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕೆಂದು ಅವರು ಕರೆ ನೀಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ಪಟ್ಟಿಯ ಶುದ್ಧತೆ ಅತ್ಯಂತ ಮಹತ್ವದ್ದಾಗಿದ್ದು, ಈ ನಿಟ್ಟಿನಲ್ಲಿ ಬಿಎಲ್ಎಗಳ ಪಾತ್ರ ನಿರ್ಣಾಯಕವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅದ್ಯಕ್ಷ ಜಿ. ಕೆ. ಕ್ರಷ್ಣ ರೆಡ್ಡಿ , ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಶ್ರೀಮತಿ ರಶ್ಮಿ ರಾಮೇಗೌಡ, ಜೆಡಿಎಸ್ ಮುಖಂಡರಾದ ಶ್ರೀ ಜಿ.ಇ. ರಾಮೇಗೌಡ, ಶ್ರೀ ಹುಡಿ ವಿಜಯಕುಮಾರ್ ಸೇರಿದಂತೆ ಪಕ್ಷದ ಹಲವು ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಬೂತ್ ಮಟ್ಟದ ಏಜೆಂಟ್ಗಳು ಉಪಸ್ಥಿತರಿದ್ದರು.
ಕಾರ್ಯಾಗಾರವು ಚುನಾವಣಾ ಪ್ರಕ್ರಿಯೆಯ ಬಗ್ಗೆ ಕಾರ್ಯಕರ್ತರಲ್ಲಿ ಹೆಚ್ಚಿನ ಅರಿವು ಮೂಡಿಸುವ ಜೊತೆಗೆ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮಾರ್ಗದರ್ಶನ ನೀಡಿದ ಮಹತ್ವದ ಕಾರ್ಯಕ್ರಮವಾಗಿ ಗುರುತಿಸಲ್ಪಟ್ಟಿತು.

