ಉಡುಪಿ: ಕಾಪು ತಾಲೂಕಿನ ಮುದರಂಗಡಿಯಲ್ಲಿ ನಡೆದ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಗೂ ಮುಂಬೈ ಮೂಲದ ನಟೋರಿಯಸ್ ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ನನ್ನು ಪೊಲೀಸರು ಬಂಧಿಸಿದ್ದಾರೆ.

ಆಗಸ್ಟ್ 7ರಂದು ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್ನಲ್ಲಿ ಪ್ರಿನ್ಸ್ ಎಂಟರ್ಪ್ರೈಸಸ್ ಮಾಲೀಕ ಡೇವಿಡ್ ಡಿಸೋಜಾ ಅವರ ತಲೆಗೆ ಪಿಸ್ತೂಲ್ನಿಂದ ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ತನಿಖೆ ನಡೆಸುತ್ತಿದ್ದ ಕುಂದಾಪುರ ಹಾಗೂ ಕೊಲ್ಲೂರು ಠಾಣೆ ಪೊಲೀಸರ ತಂಡ ಸೋಮವಾರ ಬೆಳಗ್ಗೆ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಜ್ ಪಾಟೀಲ್ನನ್ನು ವಶಕ್ಕೆ ಪಡೆದಿದೆ.
ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ, ಪಿಎಸ್ಐ ಆಯುಧ ಕಸಿದು ಗುಂಡಿನ ದಾಳಿ
ಆರೋಪಿಯನ್ನು ಪೊಲೀಸ್ ಠಾಣೆಗೆ ಕರೆತರುತ್ತಿದ್ದ ಸಂದರ್ಭದಲ್ಲಿ ಆತ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಕೊಲ್ಲೂರು ಠಾಣೆ ಪಿಎಸ್ಐ ವಿನಯ್ ಅವರ ಸರ್ವಿಸ್ ಆಯುಧವನ್ನು ಕಸಿದುಕೊಂಡು ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ವೇಳೆ ಆತ್ಮರಕ್ಷಣೆಗಾಗಿ ಕುಂದಾಪುರ ಪಿಎಸ್ಐ ನಂಜ ನಾಯಕ್ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ಅನುಜ್ ಪಾಟೀಲ್ನನ್ನು ತಕ್ಷಣ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
11ಕ್ಕೂ ಹೆಚ್ಚು ಪ್ರಕರಣಗಳ ಆರೋಪಿಯಾಗಿರುವ ಅನುಜ್
ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಅನುಜ್ ಪಾಟೀಲ್ ವಿರುದ್ಧ ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಒಟ್ಟು 11 ಪ್ರಕರಣಗಳು ದಾಖಲಾಗಿವೆ. ಮಹಾರಾಷ್ಟ್ರದಲ್ಲಿ ಆತನ ವಿರುದ್ಧ MCOCA ಕಾಯ್ದೆಯಡಿ ಪ್ರಕರಣ ಕೂಡ ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.
ಡೇವಿಡ್ ಡಿಸೋಜಾ ಅವರ ಹತ್ಯೆಗೆ ಅನುಜ್ ಪಾಟೀಲ್ನ ಪಾತ್ರವೇನು, ಕೊಲೆಯ ಹಿಂದಿನ ನಿಖರ ಕಾರಣವೇನು, ಆತನೊಂದಿಗೆ ಸಂಪರ್ಕ ಹೊಂದಿರುವ ಇತರ ಆರೋಪಿಗಳು ಯಾರು ಹಾಗೂ ಹತ್ಯೆಗೆ ಬಳಸಲಾದ ಪಿಸ್ತೂಲ್ ಮತ್ತು ಇತರ ಶಸ್ತ್ರಾಸ್ತ್ರಗಳ ಮೂಲವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಪ್ರಕರಣದಲ್ಲಿ ಇನ್ನಷ್ಟು ಆರೋಪಿಗಳ ಬಂಧನವಾಗುವ ಸಾಧ್ಯತೆ ಇದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಚುರುಕುಗೊಳಿಸಿದ್ದಾರೆ.

