ಮಂಗಳೂರು, ಜೂನ್ 20: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪಡಿತರ ಚೀಟಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಜನತಾದಳ (ಜಾತ್ಯತೀತ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ನಿಯೋಗವು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.
ಪಡಿತರ ಚೀಟಿಗಳ ಮಂಜೂರಾತಿಯಲ್ಲಿ ವಿಳಂಬ, ಹೊಸ ಅರ್ಜಿಗಳ ವಿಲೇವಾರಿಯಲ್ಲಿ ನಿರ್ಲಕ್ಷ್ಯ, ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಪ್ರಕ್ರಿಯೆಯಲ್ಲಿನ ತಾಂತ್ರಿಕ ಅಡಚಣೆಗಳು, ಅರ್ಹ ಫಲಾನುಭವಿಗಳಿಗೆ ಪಡಿತರ ಚೀಟಿ ದೊರೆಯದಿರುವುದು ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಅಧಿಕಾರಿಗಳ ಗಮನ ಸೆಳೆದ ಜೆಡಿಎಸ್ ಮುಖಂಡರು, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿದರು.

ಬಡವರು, ಕಾರ್ಮಿಕರು ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಪಡಿತರ ಚೀಟಿ ಅತ್ಯಂತ ಅವಶ್ಯಕ ದಾಖಲೆ ಆಗಿದ್ದು, ಇಲಾಖೆಯ ನಿರ್ಲಕ್ಷ್ಯದಿಂದ ಸಾವಿರಾರು ಕುಟುಂಬಗಳು ಸರ್ಕಾರದ ವಿವಿಧ ಸೌಲಭ್ಯಗಳಿಂದ ವಂಚಿತರಾಗುತ್ತಿರುವುದು ಖಂಡನೀಯ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಜನರು ಪ್ರತಿನಿತ್ಯ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಧಿಕಾರಿಗಳು ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.
ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿದ ಇಲಾಖೆಯ ಅಧಿಕಾರಿಗಳು, ಬಾಕಿ ಉಳಿದಿರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವುದಾಗಿ ಹಾಗೂ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ನಿವಾರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಇಕ್ಬಾಲ್ ಮುಲ್ಕಿ, ವಸಂತ ಪೂಜಾರಿ, ಶಶಿರಾಜ್ ಶೆಟ್ಟಿ ಕೊಳಂಬೆ, ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಯೋಗೀಶ್ ಶೆಟ್ಟಿ ಜಪ್ಪು, ಜಿಲ್ಲಾ ಯುವ ಘಟಕದ ಅಧ್ಯಕ್ಷ ಅಕ್ಷಿತ್ ಸುವರ್ಣ, ರಾಜ್ಯ ಮೀನುಗಾರರ ಘಟಕದ ಅಧ್ಯಕ್ಷ ರತ್ನಾಕರ್ ಸುವರ್ಣ, ಯುವ ಘಟಕದ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ಅದ್ಯಕ್ಷ ರತೀಶ್ ಕರ್ಕೇರ, ಮಹಿಳಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಜೈನ್, ಮಹಿಳಾ ಮುಖಂಡರಾದ ಸುಮತಿ ಹೆಗ್ಡೆ, ಜಿಲ್ಲಾ ಉಪಾಧ್ಯಕ್ಷರಾದ ಶಾರದ ಶೆಟ್ಟಿ, ವಿನ್ಸೆಂಟ್ ಡಿಸೋಜ, ಪ್ರಶಾಂತ್ ಭಟ್ ಕಡಬ, ನಜೀರ್ ಸಾಮಾಣಿಗೆ ಸೇರಿದಂತೆ ಹಲವಾರು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಜೆಡಿಎಸ್ ಪಕ್ಷವು ಜನಸಾಮಾನ್ಯರ ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರ ಹೋರಾಟ ನಡೆಸಲಿದ್ದು, ಪಡಿತರ ಚೀಟಿ ಸಮಸ್ಯೆ ಸಂಪೂರ್ಣವಾಗಿ ಬಗೆಹರಿಯುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಮುಖಂಡರು ಎಚ್ಚರಿಕೆ ನೀಡಿದರು.

