ಬೆಂಗಳೂರು : ರಾಜ್ಯದಲ್ಲಿ ಸುಳ್ಳು ಸುದ್ದಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು, ರಾಜ್ಯದ ಎಲ್ಲಾ ಠಾಣೆಗಳಲ್ಲಿ ಪ್ರತ್ಯೇಕ ಸೈಬರ್ ಘಟಕ ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಳ್ಳು ಸುದ್ದಿಗಳನ್ನು ತಡೆಯುವ ಉದ್ದೇಶದಿಂದ ಸಾಮಾಜಿಕ ಜಾಲತಾಣ ಮುಖ್ಯಸ್ಥರ ಜೊತೆಗೆ ಸಭೆ ಕರೆಯಲಾಗುತ್ತಿದೆ.
ಫೇಕ್ ಸುದ್ದಿ ಹರಿಬಿಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದಕ್ಕೆ ಕಡಿವಾನ ಹಾಕಲಾಗುವುದು ಎಂದು ಹೇಳಿದ್ದಾರೆ.
ಯಾರು ಫೇಕ್ ಸುದ್ದಿ ಹಬ್ಬಿಸುತ್ತಿದ್ದಾರೋ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಪಕ್ಷ ಇರಲಿ, ಸಂಘಟನೆ ಇರಲಿ ಅವರ ವಿರುದ್ಧ ಕ್ರಮ ನಿಶ್ಚಿತ ಎಂದು ಹೇಳಿದ್ದಾರೆ.