ಮಂಗಳೂರು, ಜುಲೈ 2: ವೈಭವೀಕರಣಕ್ಕಿಂತ ವಾಸ್ತವಾಂಶಗಳಿಗೆ ಆದ್ಯತೆ ನೀಡುವ ಪತ್ರಿಕೋದ್ಯಮವೇ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಬುನಾದಿಯಾಗಿದ್ದು, ಪತ್ರಕರ್ತರು ಸದಾ ವಸ್ತುನಿಷ್ಠ, ಪಾರದರ್ಶಕ ಹಾಗೂ ಜವಾಬ್ದಾರಿಯುತ ವರದಿಗಾರಿಕೆಯನ್ನು ಪಾಲಿಸಬೇಕು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಕರೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾಭವನ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಪತ್ರಿಕಾಭವನದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಆಡಳಿತ ವ್ಯವಸ್ಥೆ ಮತ್ತು ಮಾಧ್ಯಮಗಳ ನಡುವೆ ಉತ್ತಮ ಸಮನ್ವಯ ಬೆಳೆಯುತ್ತಿರುವುದು ಪ್ರಜಾಪ್ರಭುತ್ವದ ದೃಷ್ಟಿಯಿಂದ ಆಶಾದಾಯಕ ಬೆಳವಣಿಗೆ ಎಂದು ಅವರು ಅಭಿಪ್ರಾಯಪಟ್ಟರು. ಹಿಂದೆ ಒಂದೇ ಘಟನೆಯನ್ನು ಹಲವು ರೀತಿಯಲ್ಲಿ ವೈಭವೀಕರಿಸಿ ಬಿಂಬಿಸಲಾಗುತ್ತಿತ್ತು. ಆದರೆ ಈಗ ಫ್ಯಾಕ್ಟ್ ಚೆಕ್ಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಸತ್ಯಾಧಾರಿತ ವರದಿಗಾರಿಕೆಯತ್ತ ಮಾಧ್ಯಮಗಳು ಸಾಗುತ್ತಿರುವುದು ಸ್ವಾಗತಾರ್ಹ ಎಂದರು.
ಸಮಾಜದಲ್ಲಿ ಶಾಂತಿ, ಸೌಹಾರ್ದ ಮತ್ತು ಪರಸ್ಪರ ವಿಶ್ವಾಸ ಉಳಿಯಬೇಕಾದರೆ ಜವಾಬ್ದಾರಿಯುತ ವರದಿಗಾರಿಕೆ ಅಗತ್ಯ. ವಿಶೇಷವಾಗಿ ಸೂಕ್ಷ್ಮ ಹಾಗೂ ಕೋಮು ಸೌಹಾರ್ದಕ್ಕೆ ಸಂಬಂಧಿಸಿದ ಸಂದರ್ಭಗಳಲ್ಲಿ ಪತ್ರಕರ್ತರು ಅತ್ಯಂತ ಎಚ್ಚರಿಕೆಯಿಂದ ವರ್ತಿಸಬೇಕು ಎಂದು ಅವರು ಸಲಹೆ ನೀಡಿದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಅರಣ್ಯ ಸಂರಕ್ಷಣಾಕಾರಿ ಡಾ. ವಿ. ಕರಿಕಾಲನ್, ಪತ್ರಕರ್ತರು ಸಮಾಜದ ಕಾವಲುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ ಎಂದು ಶ್ಲಾಘಿಸಿದರು. ಕರಾವಳಿ ಭಾಗದ ಯುವಜನರು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಸರ್ಕಾರಿ ಸೇವೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶಿಸುವಂತೆ ಕರೆ ನೀಡಿದರು.
‘ಡಿಜಿಟಲ್ ಯುಗದಲ್ಲಿ ಪತ್ರಿಕೋದ್ಯಮದ ಸವಾಲುಗಳು’ ವಿಷಯವಾಗಿ ವಿಶೇಷ ಉಪನ್ಯಾಸ ನೀಡಿದ ನ್ಯೂಸ್-18 ಪ್ರಧಾನ ಸಂಪಾದಕ ಹರಿಪ್ರಸಾದ್ ಅಡ್ಪಂಗಾಯ, ಸಾಮಾಜಿಕ ಜಾಲತಾಣಗಳು ಮತ್ತು ಡಿಜಿಟಲ್ ವೇದಿಕೆಗಳ ಮೂಲಕ ಸುಳ್ಳು ಸುದ್ದಿಗಳ ಹರಡುವಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪತ್ರಕರ್ತರ ಹೊಣೆಗಾರಿಕೆ ಇನ್ನಷ್ಟು ವಿಸ್ತರಿಸಿದೆ ಎಂದರು. ಜಾತಿ, ಧರ್ಮ ಅಥವಾ ಭಾವೋದ್ರೇಕದ ಆಧಾರದ ವೈಭವೀಕರಣವನ್ನು ದೂರವಿಟ್ಟು, ನಿಷ್ಪಕ್ಷಪಾತ ಹಾಗೂ ವಿಶ್ವಾಸಾರ್ಹ ಸುದ್ದಿಗಳಿಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ 1843ರ ಜುಲೈ 1ರಂದು ರೆವರೆಂಡ್ ಹರ್ಮನ್ ಮೊಗ್ಲಿಂಗ್ ಅವರು ಕನ್ನಡದ ಮೊದಲ ಪತ್ರಿಕೆ ‘ಮಂಗಳೂರು ಸಮಾಚಾರ’ ಆರಂಭಿಸಿದ ಐತಿಹಾಸಿಕ ದಿನವನ್ನು ಸ್ಮರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ವಹಿಸಿದ್ದರು. ಹಿರಿಯ ಪತ್ರಿಕಾ ವಿತರಕ ತಿಮ್ಮಪ್ಪ ಶೆಟ್ಟಿ ಅವರನ್ನು ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ಪತ್ರಕರ್ತರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನಿಸಲಾಯಿತು.
ವೇದಿಕೆಯಲ್ಲಿ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ವಿಜಯ ಕೋಟ್ಯಾನ್ ಪಡು ಪ್ರತಿಭಾ ಪುರಸ್ಕಾರದ ವಿವರಗಳನ್ನು ನೀಡಿದರೆ, ಉಪಾಧ್ಯಕ್ಷ ಆರಿಫ್ ಪಡುಬಿದ್ರೆ ಕಾರ್ಯಕ್ರಮ ನಿರೂಪಿಸಿದರು.

