ಮಂಗಳೂರು, ಜುಲೈ 2: ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಅಸೈಗೋಳಿ ಅವರು ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳಿದ್ದು, ಜನತಾದಳ (ಜಾತ್ಯತೀತ) ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.
ಜಿಲ್ಲಾ ಅಧ್ಯಕ್ಷರಾದ ಜಾಕೆ ಮಾಧವ ಗೌಡ ಅವರ ನಿರ್ದೇಶನದಂತೆ ಗುರುವಾರ ದಿನಾಂಕ 02-07-2026 ರಂದು ಜೆಡಿಎಸ್ ರಾಜ್ಯ ಮೀನುಗಾರರ ಘಟಕದ ಅಧ್ಯಕ್ಷ ರತ್ನಾಕರ ಸುವರ್ಣ, ಜಿಲ್ಲಾ ಕಾರ್ಯಾಧ್ಯಕ್ಷರಾದ ಇಕ್ಬಾಲ್ ಅಹಮ್ಮದ್ ಮುಲ್ಕಿ ಹಾಗೂ ವಸಂತ್ ಪೂಜಾರಿ ಅವರ ಉಪಸ್ಥಿತಿಯಲ್ಲಿ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು ಅವರು ಪಕ್ಷದ ಶಾಲು ಹೊದಿಸಿ ಪ್ರಕಾಶ್ ಶೆಟ್ಟಿ ಅಸೈಗೋಳಿ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು.
ಪ್ರಕಾಶ್ ಶೆಟ್ಟಿ ಅಸೈಗೋಳಿ ಅವರು ವಿದ್ಯಾರ್ಥಿ ಜೀವನದಿಂದಲೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡಿದ್ದು, ಮಂಗಳೂರು ಸರ್ಕಾರಿ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಸಾರ್ವಜನಿಕ ಸೇವೆಯಲ್ಲಿ ತೊಡಗಿ ತಾಲೂಕು ಪಂಚಾಯತ್ ಉಪಾಧ್ಯಕ್ಷರಾಗಿ ಜನಪರ ಆಡಳಿತ ನೀಡುವ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ್ದರು.
ಅವರ ರಾಜಕೀಯ ಅನುಭವ, ಸಂಘಟನಾ ಸಾಮರ್ಥ್ಯ ಹಾಗೂ ಜನಸಂಪರ್ಕವನ್ನು ಗಮನಿಸಿದರೆ, ಜೆಡಿಎಸ್ ಪಕ್ಷದ ಸಂಘಟನೆಗೆ ಅವರ ಸೇರ್ಪಡೆಯಿಂದ ಹೊಸ ಚೈತನ್ಯ ಮೂಡಲಿದ್ದು, ಪಕ್ಷಕ್ಕೆ ಮತ್ತಷ್ಟು ಬಲ ದೊರೆಯಲಿದೆ ಎಂದು ಪಕ್ಷದ ಮುಖಂಡರು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು, “ಪ್ರಕಾಶ್ ಶೆಟ್ಟಿ ಅಸೈಗೋಳಿ ಅವರಂತಹ ಅನುಭವಿ ನಾಯಕರು ಮತ್ತೆ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಜೆಡಿಎಸ್ಗೆ ದೊಡ್ಡ ಶಕ್ತಿಯಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಹಲವು ಗಣ್ಯರು, ಸಮಾಜಮುಖಿ ನಾಯಕರು ಹಾಗೂ ವಿವಿಧ ಕ್ಷೇತ್ರಗಳ ಪ್ರಮುಖರು ಪಕ್ಷದ ಸಂಪರ್ಕದಲ್ಲಿದ್ದು, ಶೀಘ್ರದಲ್ಲೇ ಇನ್ನಷ್ಟು ಮುಖಂಡರು ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ. ಇದರಿಂದ ಪಕ್ಷದ ಸಂಘಟನೆ ಮತ್ತಷ್ಟು ಬಲಿಷ್ಠವಾಗಲಿದೆ,” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಕ್ಷದ ವಿವಿಧ ಘಟಕಗಳ ಮುಖಂಡರು, ಕಾರ್ಯಕರ್ತರು ಹಾಗೂ ಬೆಂಬಲಿಗರು ಉಪಸ್ಥಿತರಿದ್ದು, ಪ್ರಕಾಶ್ ಶೆಟ್ಟಿ ಅಸೈಗೋಳಿ ಅವರ ಸೇರ್ಪಡೆಯನ್ನು ಸ್ವಾಗತಿಸಿ ಅಭಿನಂದಿಸಿದರು.


