ಮಂಗಳೂರು, ಜುಲೈ 31: ಜನತಾದಳ (ಜಾತ್ಯತೀತ) ಪಕ್ಷದ ಮೀನುಗಾರ ಘಟಕದ ರಾಜ್ಯಾಧ್ಯಕ್ಷ ರತ್ನಾಕರ್ ಸುವರ್ಣ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾವಚಿತ್ರದೊಂದಿಗೆ ಸುಳ್ಳು ಮರಣ ಸುದ್ದಿಯನ್ನು ಹರಿಬಿಟ್ಟು ಮಾನಹಾನಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಮತ್ತು ಗೊಂದಲ ಸೃಷ್ಟಿಸಿರುವ ಘಟನೆ ಅತ್ಯಂತ ಖಂಡನೀಯ ಎಂದು ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಾರೋ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ರತ್ನಾಕರ್ ಸುವರ್ಣ ಅವರು ಮೃತಪಟ್ಟಿದ್ದಾರೆ ಎಂಬ ಸುಳ್ಳು ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿರುವ ಪರಿಣಾಮ ಅವರ ಕುಟುಂಬದ ಸದಸ್ಯರು, ಸಂಬಂಧಿಕರು, ಸ್ನೇಹಿತರು, ಪಕ್ಷದ ಮುಖಂಡರು ಹಾಗೂ ಹಿತೈಷಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಇಂತಹ ದುರುದ್ದೇಶಪೂರಿತ ಕೃತ್ಯಗಳು ವ್ಯಕ್ತಿಯ ಘನತೆ, ಗೌರವ ಹಾಗೂ ಸಾಮಾಜಿಕ ವಿಶ್ವಾಸಕ್ಕೆ ಧಕ್ಕೆ ತರುವುದಲ್ಲದೆ, ಸಮಾಜದಲ್ಲಿ ಸುಳ್ಳು ಸುದ್ದಿಗಳಿಗೆ ಉತ್ತೇಜನ ನೀಡುವ ಅಪಾಯಕಾರಿ ಪ್ರವೃತ್ತಿಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳ ದುರುಪಯೋಗ ಮಾಡಿಕೊಂಡು ಸುಳ್ಳು ಮಾಹಿತಿ ಹರಡುವುದು ಗಂಭೀರ ಅಪರಾಧವಾಗಿದ್ದು, ಇಂತಹ ಕೃತ್ಯಗಳಲ್ಲಿ ತೊಡಗಿರುವವರ ವಿರುದ್ಧ ಯಾವುದೇ ರೀತಿಯ ಮೃದು ಧೋರಣೆ ಅನುಸರಿಸಬಾರದು. ಸೈಬರ್ ತಾಂತ್ರಿಕ ತನಿಖೆಯ ಮೂಲಕ ಈ ಕೃತ್ಯದ ಹಿಂದಿರುವ ಆರೋಪಿಗಳನ್ನು ಶೀಘ್ರವಾಗಿ ಪತ್ತೆಹಚ್ಚಿ, ಭಾರತೀಯ ನ್ಯಾಯ ಸಂಹಿತೆ (BNS), ಮಾಹಿತಿ ತಂತ್ರಜ್ಞಾನ ಕಾಯ್ದೆ (IT Act) ಸೇರಿದಂತೆ ಅನ್ವಯವಾಗುವ ಕಾನೂನುಗಳ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಮುಖಂಡರು ಆಗ್ರಹಿಸಿದ್ದಾರೆ.
ಈ ಕುರಿತು ರತ್ನಾಕರ್ ಸುವರ್ಣ ಅವರು ದಕ್ಷಿಣ ಮಂಗಳೂರು ಪೊಲೀಸ್ ಠಾಣೆಗೆ ಅಧಿಕೃತ ದೂರು ಸಲ್ಲಿಸಿರುವ ಹಿನ್ನೆಲೆಯಲ್ಲಿ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರನ್ನು ಕಾನೂನಿನ ಮುಂದೆ ತರಬೇಕೆಂದು ಅವರು ಒತ್ತಾಯಿಸಿದ್ದಾರೆ.
ಈ ಸಂಬಂಧ ಜೆಡಿಎಸ್ ಮುಖಂಡರ ನಿಯೋಗವು ಪಾಂಡೇಶ್ವರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ, ಸುಳ್ಳು ಮರಣ ಸುದ್ದಿ ಹರಡಿರುವ ಕಿಡಿಗೇಡಿಗಳನ್ನು ಶೀಘ್ರವಾಗಿ ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿತು.

ನಿಯೋಗದಲ್ಲಿ ಜೆಡಿಎಸ್ ಕಾರ್ಯಾಧ್ಯಕ್ಷ ಇಕ್ಬಾಲ್ ಮುಲ್ಕಿ, ವಸಂತ ಪೂಜಾರಿ, ಮುನೀರ್ ಮುಕ್ಕಚೇರಿ, ಪ್ರಶಾಂತ್ ಭಟ್ ಕಡಬ ಮತ್ತು ರತ್ನಾಕರ್ ರವರ ಸಂಬಂಧಿಕರಾದ ಚರಣ್ ದವರು ಸೇರಿದಂತೆ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.

ಮನವಿಯನ್ನು ಸ್ವೀಕರಿಸಿದ ಪೊಲೀಸ್ ಉಪನಿರೀಕ್ಷಕ ಪ್ರದೀಪ್ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸೈಬರ್ ತಾಂತ್ರಿಕ ತನಿಖೆಯ ಮೂಲಕ ಆರೋಪಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಯಾವುದೇ ಮಾಹಿತಿಯನ್ನು ಪರಿಶೀಲಿಸದೆ ಹಂಚಿಕೊಳ್ಳಬಾರದು. ಸುಳ್ಳು ಸುದ್ದಿ, ವದಂತಿ ಅಥವಾ ಮಾನಹಾನಿಕರ ಪೋಸ್ಟ್ಗಳು ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಜವಾಬ್ದಾರಿಯುತ ನಾಗರಿಕರಾಗಿ ವರ್ತಿಸುವಂತೆ ಯೋಗಿಶ್ ಶೆಟ್ಟಿ ಜಪ್ಪು ಮನವಿ ಮಾಡಿದ್ದಾರೆ.

