ಮಂಗಳೂರು, ಆ. 3: ಸಹಕಾರ ಕ್ಷೇತ್ರದ ಪಿತಾಮಹರೆಂದೇ ಖ್ಯಾತರಾದ ಮೊಳಹಳ್ಳಿ ಶಿವರಾವ್ ಅವರ ಆದರ್ಶಮಯ ಬದುಕು, ತ್ಯಾಗ, ದೂರದೃಷ್ಟಿ ಮತ್ತು ಸಮಾಜಮುಖಿ ಸೇವೆಯನ್ನು ದಾಖಲಿಸುವ ‘ತ್ಯಾಗಮಯಿ ಮೊಳಹಳ್ಳಿ’ ಕೃತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಸೋಮವಾರ ಬ್ಯಾಂಕಿನ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು.

ಬ್ಯಾಂಕಿನ ಪ್ರಧಾನ ಕಚೇರಿಯ ಕಿರಿಯ ನಿರೀಕ್ಷಕರಾಗಿದ್ದು, ಸುಮಾರು 35 ವರ್ಷಗಳಿಂದ ಕ್ರೀಡಾ ಪತ್ರಿಕೋದ್ಯಮದಲ್ಲಿ ವಿಶಿಷ್ಟ ಗುರುತನ್ನು ಮೂಡಿಸಿರುವ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ಪೇಟೆ ಅವರು ಈ ಕೃತಿಯನ್ನು ರಚಿಸಿದ್ದಾರೆ. ಸಹಕಾರ ಚಳವಳಿಯ ಮೂಲಕ ಗ್ರಾಮೀಣ ಜನರ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಅಭಿವೃದ್ಧಿಗೆ ಬದುಕನ್ನೇ ಸಮರ್ಪಿಸಿದ ಮೊಳಹಳ್ಳಿ ಶಿವರಾವ್ ಅವರ ಜೀವನ ಸಾಧನೆ ಮತ್ತು ಸೇವಾ ಪರಂಪರೆಯನ್ನು ಈ ಕೃತಿ ದಾಖಲಿಸುತ್ತದೆ.
ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಡಾ. ಎಂ.ಎನ್. ರಾಜೇಂದ್ರ ಕುಮಾರ್, “ಸಹಕಾರ ಕ್ಷೇತ್ರದ ಬೆಳವಣಿಗೆಯಲ್ಲಿ ಮೊಳಹಳ್ಳಿ ಶಿವರಾವ್ ಅವರ ಕೊಡುಗೆ ಅಪಾರವಾಗಿದೆ. ಎತ್ತಿನಗಾಡಿಯಲ್ಲಿ ಸಂಚರಿಸಿ ಜಿಲ್ಲೆಯ ವಿವಿಧ ಭಾಗಗಳಿಗೆ ತೆರಳಿ ಸಹಕಾರ ಚಳವಳಿಯನ್ನು ಬಲಪಡಿಸಲು ಅವರು ಶ್ರಮಿಸಿದ್ದರು. ಕುಂದಾಪುರದ ಮೊಳಹಳ್ಳಿಯಲ್ಲಿ ಜನಿಸಿದ ಅವರು, ಪುತ್ತೂರಿನಲ್ಲಿ ವಕೀಲ ವೃತ್ತಿ ನಡೆಸುತ್ತಲೇ ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಅಮೂಲ್ಯ ಸೇವೆ ಸಲ್ಲಿಸಿದರು. ಅವರ ಜೀವನಗಾಥೆ ಇಂದಿನ ಯುವಪೀಳಿಗೆಗೆ ಸ್ಫೂರ್ತಿ ಹಾಗೂ ಮಾರ್ಗದರ್ಶನವಾಗಲಿದೆ,” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಿನಾಥ್ ಭಟ್, ನಿರ್ದೇಶಕ ಶಶಿಕುಮಾರ್ ರೈ ಬಾಳ್ಯೊಟ್ಟು, ನಬಾರ್ಡ್ನ ಮಹಾಪ್ರಬಂಧಕ ಸಂಗೀತ, ರಮೇಶ್, ಅಶೋಕ್ ಕುಮಾರ್ ಶೆಟ್ಟಿ, ಸುಧೀರ್ ಕುಮಾರ್, ಕೃತಿಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

