ಬೆಂಗಳೂರು: ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ 2ನೇ ಬಾರಿಗೆ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದಂತ ಬೃಹತ್ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳಿಗೆ ಗೌಪ್ಯ ಪ್ರಮಾಣವಚನ ಭೋಧಿಸಿದರು.
ಕರ್ನಾಟಕದ ಮುಖ್ಯಮಂತ್ರಿಯಾಗಿ ಇಂದು ದೇವರ ಹೆಸರಿನಲ್ಲಿ ಸಿದ್ಧರಾಮಯ್ಯ ಅವರು 2ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದರು. ಉಪ ಮುಖ್ಯಮಂತ್ರಿಯಾಗಿ ಅಜ್ಜಯ್ಯನ ಹೆಸರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರು.
ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಮುಖ್ಯಸ್ಥ ಸಿದ್ದರಾಮಯ್ಯ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇಂದು ಕ್ರಮವಾಗಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಪ್ರತಿಪಕ್ಷಗಳ ಒಗ್ಗಟ್ಟನ್ನು ರೂಪಿಸಲು ಪಕ್ಷದ ಒತ್ತಡದ ಮಧ್ಯೆ ಇಬ್ಬರು ಹಿರಿಯ ನಾಯಕರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕಾಂಗ್ರೆಸ್ ಉನ್ನತ ನಾಯಕರು ಮತ್ತು ಅನೇಕ ವಿರೋಧ ಪಕ್ಷದ ನಾಯಕರು ಭಾಗವಹಿಸಿದ್ದರು.
ಕೆಲ ದಿನಗಳ ಹಿಂದಷ್ಟೇ ಕರ್ನಾಟಕದಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದು, ಬಿಜೆಪಿಯನ್ನು 66 ಸ್ಥಾನಗಳಿಗೆ ಇಳಿಸಿತ್ತು. ಸ್ಪಷ್ಟ ಬಹುಮತ ಪಡೆದಿದ್ದಂತ ಕಾಂಗ್ರೆಸ್ ಪಕ್ಷದಿಂದ ಸಿಎಂ ಆಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಿತ್ತು. ಈ ಬೆನ್ನಲ್ಲೇ ಇಂದು ಸಿಎಂ, ಡಿಸಿಎಂ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು.