ಉಡುಪಿ, ಜುಲೈ 17: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ (UUDA) ಆಯುಕ್ತ ಮಂಜುನಾಥ್ ಅವರು ದಕ್ಷತೆ, ಪಾರದರ್ಶಕತೆ ಹಾಗೂ ಜನಪರ ಆಡಳಿತದ ಮೂಲಕ ಉತ್ತಮ ಕಾರ್ಯನಿರ್ವಹಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಕರ್ನಾಟಕ ಸೇನೆ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.
ಶುಕ್ರವಾರ ನಮ್ಮ ಕರ್ನಾಟಕ ಸೇನೆ ಉಡುಪಿ ಜಿಲ್ಲಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸುಜಯ ಪೂಜಾರಿ ಅವರ ನೇತೃತ್ವದಲ್ಲಿ ನಿಯೋಗವು ಆಯುಕ್ತರ ಕಚೇರಿಗೆ ಭೇಟಿ ನೀಡಿ ಗೌರವಿಸಿ ಶುಭ ಹಾರೈಸಿತು.
ಈ ವೇಳೆ ಮಾತನಾಡಿದ ಸುಜಯ ಪೂಜಾರಿ, ಕಳೆದ ಮೂರು ತಿಂಗಳ ಅವಧಿಯಲ್ಲಿ ಸುಮಾರು 600ಕ್ಕೂ ಹೆಚ್ಚು ಕಡತಗಳನ್ನು ವಿಲೇವಾರಿ ಮಾಡುವ ಮೂಲಕ ಸಾರ್ವಜನಿಕರ ಕೆಲಸಗಳಿಗೆ ವೇಗ ನೀಡಿರುವುದು ಶ್ಲಾಘನೀಯ ಸಾಧನೆ ಎಂದು ಹೇಳಿದರು. ಜನಸ್ನೇಹಿ ಆಡಳಿತ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸುಳ್ಳು ಆರೋಪಗಳನ್ನು ಮಾಡಿ ಅವರ ಆತ್ಮಸ್ಥೈರ್ಯ ಕುಗ್ಗಿಸಲು ಯತ್ನಿಸುತ್ತಿರುವುದು ಖಂಡನೀಯ ಎಂದರು.
ಯಾವುದೇ ವದಂತಿಗಳಿಗೆ ಕಿವಿಗೊಡದೆ, ಸಾರ್ವಜನಿಕರು ತಮ್ಮ ಕೆಲಸಗಳಿಗೆ ನೇರವಾಗಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನು ಭೇಟಿ ಮಾಡಿ ಸಮಸ್ಯೆಗಳಿಗೆ ಪರಿಹಾರ ಪಡೆಯುವಂತೆ ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್ ಶೆಟ್ಟಿ, ಜಿಲ್ಲಾ ಸಲಹೆಗಾರ ತೇಜಸ್ ರಾವ್, ಜಿಲ್ಲಾ ಉಪಾಧ್ಯಕ್ಷ ನಾಗರಾಜ್, ಜಿಲ್ಲಾ ಕಾರ್ಯದರ್ಶಿ ಸರ್ವೋತ್ತಮ್, ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಸಿದ್ದಣ್ಣ ಎಸ್. ಪೂಜಾರಿ, ಜಿಲ್ಲಾ ಕಾರ್ಮಿಕ ಘಟಕದ ಉಪಾಧ್ಯಕ್ಷ ಮೊಹಮ್ಮದ್ ಜಾಫರ್, ತಾಲೂಕು ಆಟೋ ಚಾಲಕರ ಘಟಕದ ಅಧ್ಯಕ್ಷ ಸತೀಶ್, ಜಿಲ್ಲಾ ಸದಸ್ಯರಾದ ಮಂಜು, ಪಾಂಡು, ಸಿದ್ದು ಹಾಗೂ ಪ್ರಕಾಶ್ ಉಪಸ್ಥಿತರಿದ್ದರು.

