ಉಡುಪಿ, ಸೆ.22: ಉಡುಪಿ ಜಿಲ್ಲೆಯಲ್ಲಿ ಮಾದಕ ದ್ರವ್ಯಗಳ ಅಕ್ರಮ ಮಾರಾಟ ಮತ್ತು ಬಳಕೆಗೆ ಕಡಿವಾಣ ಹಾಕಿ, ಯುವಜನರನ್ನು ದುಶ್ಚಟಗಳಿಂದ ರಕ್ಷಿಸಲು ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನಮ್ಮ ಕರ್ನಾಟಕ ಸೇನೆ ವತಿಯಿಂದ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಲಾಯಿತು.
ಉಡುಪಿ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಸಂಭವಿಸುತ್ತಿರುವ ಹಲವು ಘಟನೆಗಳ ಹಿಂದೆ ಮಾದಕ ದ್ರವ್ಯಗಳ ಬಳಕೆಯ ಶಂಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ಮಾದಕ ದ್ರವ್ಯಗಳ ಅಕ್ರಮ ಮಾರಾಟ ಮತ್ತು ಸಾಗಾಟದ ಬಗ್ಗೆ ಸಮಗ್ರ ತನಿಖೆ ನಡೆಸುವ ಅಗತ್ಯವಿದೆ ಎಂದು ಸಂಘಟನೆ ಮನವಿಯಲ್ಲಿ ತಿಳಿಸಿದೆ.
ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಗುಪ್ತವಾಗಿ ಮಾದಕ ದ್ರವ್ಯಗಳ ಮಾರಾಟ ನಡೆಯುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಅನುಮಾನಗಳು ವ್ಯಕ್ತವಾಗುತ್ತಿದ್ದು, ಈ ಕುರಿತು ಪೊಲೀಸ್ ಇಲಾಖೆ ಹೆಚ್ಚಿನ ನಿಗಾ ವಹಿಸಬೇಕು. ಪ್ರತಿಯೊಂದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ದ್ರವ್ಯಗಳ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿ, ಮಾರಾಟಗಾರರು ಹಾಗೂ ಪೂರೈಕೆ ಜಾಲದ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ.
ಮಾದಕ ದ್ರವ್ಯಗಳ ವಿರುದ್ಧದ ಕಾರ್ಯಾಚರಣೆಯನ್ನು ಮತ್ತಷ್ಟು ಪರಿಣಾಮಕಾರಿಗೊಳಿಸಲು ಸಾರ್ವಜನಿಕರ ಸಹಕಾರ ಪಡೆದುಕೊಳ್ಳುವುದರ ಜೊತೆಗೆ, ಕಾನೂನುಬದ್ಧವಾಗಿ ಮಾಹಿತಿ ಸಂಗ್ರಹಿಸುವ ವ್ಯವಸ್ಥೆಯನ್ನು ಬಲಪಡಿಸಬೇಕು. ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಜನರು ಮಾದಕ ದ್ರವ್ಯಗಳ ವ್ಯಸನಕ್ಕೆ ಒಳಗಾಗದಂತೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಸಂಘಟನೆ ಒತ್ತಾಯಿಸಿದೆ.
ಮಾದಕ ದ್ರವ್ಯ ವ್ಯಸನವು ವ್ಯಕ್ತಿಯ ಆರೋಗ್ಯ, ಕುಟುಂಬ ಮತ್ತು ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುವುದರಿಂದ, ಈ ಸಮಸ್ಯೆಯನ್ನು ಕೇವಲ ಕಾನೂನು ಸುವ್ಯವಸ್ಥೆಯ ವಿಚಾರವಾಗಿ ನೋಡದೆ ಸಾಮಾಜಿಕ ಹೊಣೆಗಾರಿಕೆಯೊಂದಿಗೆ ನಿಯಂತ್ರಿಸುವ ಅಗತ್ಯವಿದೆ. ಜಿಲ್ಲೆಯಲ್ಲಿ ಮಾದಕ ದ್ರವ್ಯಗಳ ಅಕ್ರಮ ಚಟುವಟಿಕೆಗಳಿಗೆ ಸಂಪೂರ್ಣ ಕಡಿವಾಣ ಹಾಕಲು ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸಬೇಕು ಎಂದು ಸಂಘಟನೆ ಮನವಿ ಮಾಡಿದೆ.
ಈ ಹಿನ್ನೆಲೆಯಲ್ಲಿ ನಮ್ಮ ಕರ್ನಾಟಕ ಸೇನೆಯ ಉಡುಪಿ ಜಿಲ್ಲಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಉಸ್ತುವಾರಿ ಸುಜಯ್ ಪೂಜಾರಿ ನೇತೃತ್ವದಲ್ಲಿ ಪದಾಧಿಕಾರಿಗಳು ಹಾಗೂ ಸದಸ್ಯರು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗೌರವಾಧ್ಯಕ್ಷ ಲಕ್ಷ್ಮೀಶ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಆನಂದ್ ಶೆಟ್ಟಿ, ಜಿಲ್ಲಾ ಗೌರವ ಸಲಹೆಗಾರ ಪ್ರಕಾಶ್ ದೇವಾಡಿಗ, ತೇಜಸ್ ರಾವ್, ಜಿಲ್ಲಾ ಸಂಘಟನೆ ಕಾರ್ಯದರ್ಶಿ ಸುಬ್ಬಣ್ಣ ಕಾಮತ್, ಜಿಲ್ಲಾ ಕಾರ್ಮಿಕರ ಅಧ್ಯಕ್ಷ ಸಿದ್ದಣ್ಣ ಎಸ್. ಪೂಜಾರಿ, ಜಿಲ್ಲಾ ಕಾರ್ಯದರ್ಶಿ ಸರ್ವೋತ್ತಮ, ಜಿಲ್ಲಾ ಸಂಸ್ಕೃತ ಕಾರ್ಯದರ್ಶಿ ಗಣೇಶ್ ಆಚಾರ್ಯ, ಜಿಲ್ಲಾ ಸದಸ್ಯರಾದ ಅನಿಲ್ ಹಾಗೂ ಸುಕುಮಾರ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

