ಉತ್ತರಕಾಶಿಯ ಧರಾಲಿ ಗ್ರಾಮದಲ್ಲಿ ಭಾರೀ ಮೇಘಸ್ಫೋಟ ಮತ್ತು ಭೂಕುಸಿತ ಸಂಭವಿಸಿ, ಗಂಗೋತ್ರಿ ಧಾಮಕ್ಕೆ ಹೋಗುವ ರಸ್ತೆ ಸಂಪರ್ಕ ಕಡಿತಗೊಂಡಿದೆ. ಅನೇಕರು ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ
ಉತ್ತರಾಖಂಡ್ನ ಉತ್ತರಕಾಶಿಯಲ್ಲಿ ಭಾರೀ ಮೇಘಸ್ಪೋಟ ಸಂಭವಿಸಿದ್ದು, ಇದರ ಬೆನ್ನಲ್ಲಿಯೇ ಭೂಕುಸಿತವಾಗಿದೆ. ಇದರಿಂದಾಗಿ ಧರಾಲಿ ಎನ್ನುವ ಗ್ರಾಮ ಸಂಪೂರ್ಣವಾಗಿ ನಿರ್ನಾಮವಾಗಿದೆ. ಮೇಘಸ್ಫೋಟದ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದ್ದು ಬೆಚ್ಚಿಬೀಳಿಸುವಂತಿದೆ
ಉತ್ತರಕಾಶಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರಶಾಂತ್ ಆರ್ಯ ಮಾತನಾಡಿದ್ದು, ಹರ್ಸಿಲ್ ಬಳಿಯ ಧರಾಲಿಯಲ್ಲಿ ದೊಡ್ಡ ಮೋಡ ಸ್ಫೋಟ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ತಂಡಗಳು ಸ್ಥಳಕ್ಕೆ ಧಾವಿಸುತ್ತಿವೆ. ಸೇನೆಯನ್ನೂ ಕರೆಸಲಾಗಿದೆ
ನೀರು ತುಂಬಿಕೊಂಡು ಕೆಸರಿನ ಮಣ್ಣು ಗ್ರಾಮಕ್ಕೆ ನುಗ್ಗಿದ್ದು, ಅನೇಕ ಜನರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸಾವುನೋವುಗಳ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಅಂದಾಜಿನ ಪ್ರಕಾರ 65 ಮಂದಿ ಜಲಸಮಾಧಿಯಾಗಿರುವ ಸಾಧ್ಯತೆ ಇದೆ
“ಧರಾಲಿ (ಉತ್ತರಕಾಶಿ) ಪ್ರದೇಶದಲ್ಲಿ ಮೇಘಸ್ಫೋಟದಿಂದ ಉಂಟಾದ ಭಾರೀ ಹಾನಿಯ ಸುದ್ದಿ ಅತ್ಯಂತ ದುಃಖಕರವಾಗಿದೆ. ಎಸ್ಡಿಆರ್ಎಫ್, ಎನ್ಡಿಆರ್ಎಫ್, ಜಿಲ್ಲಾಡಳಿತ ಮತ್ತು ಇತರ ಸಂಬಂಧಿತ ತಂಡಗಳು ಯುದ್ಧೋಪಾದಿಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಈ ನಿಟ್ಟಿನಲ್ಲಿ, ನಾನು ಹಿರಿಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಎಲ್ಲರ ಸುರಕ್ಷತೆಗಾಗಿ ನಾನು ದೇವರನ್ನು ಪ್ರಾರ್ಥಿಸುತ್ತೇನೆ” ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ
ಜಿಲ್ಲಾ ಅಧಿಕಾರಿಗಳ ಪ್ರಕಾರ, ರಸ್ತೆಗಳು ಮುಚ್ಚಿಹೋಗಿರುವುದು ಮತ್ತು ನಿರಂತರ ಮಳೆಯಿಂದಾಗಿ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ, ಆದರೆ ಕಾಣೆಯಾದವರನ್ನು ಪತ್ತೆಹಚ್ಚಲು ಮತ್ತು ಸಂತ್ರಸ್ತರಿಗೆ ಸಹಾಯ ಮಾಡಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಚಾರ್ ಧಾಮ್ ಯಾತ್ರಾ ಸ್ಥಳಗಳಲ್ಲಿ ಒಂದಾದ ಗಂಗೋತ್ರಿಧಾಮವು ಸಂಪೂರ್ಣವಾಗಿ ಸಂಪರ್ಕ ಕಡಿತಗೊಂಡಿದೆ.
