ಹಾಸನ : ವಿದೇಶಿ ಮಹಿಳೆಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ನಗರದ ಹೊರವಲಯದಲ್ಲಿರುವ ಲಾಡ್ಜ್ೊಂದರ ಮೇಲೆ ಪೊಲೀಸರು ದಾಳಿ ನಡೆಸಿ ಮೂವರು ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಓರ್ವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ನಗರದ ಬೂವನಹಳ್ಳಿ ಸಮೀಪ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ‘ಕರಾವಳಿ ಕಂಫರ್ಟ್’ ಲಾಡ್ಜ್ನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಖಚಿತ ಮಾಹಿತಿ ಬಡಾವಣೆ ಪೊಲೀಸ್ ಠಾಣೆಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಬಡಾವಣೆ ಠಾಣೆ ಪೊಲೀಸರು ಹಾಗೂ ‘ಒಡನಾಡಿ’ ಸಂಸ್ಥೆಯ ಕಾರ್ಯಕರ್ತರು ಜಂಟಿಯಾಗಿ ದಾಳಿ ನಡೆಸಿದರು.
ದಾಳಿಯ ವೇಳೆ ಲಾಡ್ಜ್ನಲ್ಲಿ ಇದ್ದ ಮೂವರು ಮಹಿಳೆಯರನ್ನು ಪೊಲೀಸರು ರಕ್ಷಿಸಿದ್ದು, ಅವರನ್ನು ವಿದೇಶದಿಂದ ಕರೆತರಲಾಗಿದ್ದು ಅಕ್ರಮ ದಂಧೆಗೆ ಬಳಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ. ದಾಳಿಯ ಸಮಯದಲ್ಲಿ ಇನ್ನೂ ಕೆಲವರು ಸ್ಥಳದಿಂದ ಪರಾರಿಯಾಗಿದ್ದು, ಅವರನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.
ಈ ಕುರಿತು ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

