ಉಳ್ಳಾಲ : ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸತೀಶ್ ಕುಂಪಲರವರು ಇಂದು ನಾಮಪತ್ರ ಸಲ್ಲಿಸಿದರು.
ಈ ಸಂದರ್ಭ ಅಭ್ಯರ್ಥಿಯವರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದ.ಕ.ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಮಂಗಳೂರು ಮಂಡಲಾಧ್ಯಕ್ಷ ಚಂದ್ರಹಾಸ ಪಂಡಿತ್‌ಹೌಸ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ಬೋಳಿಯಾರ್ ಹಾಗೂ ಮಾಜಿ ಸಚಿವ ಕೃಷ್ಣ ಜೆ ಪಾಲೆಮಾರ್ ಉಪಸ್ಥಿತರಿದ್ದರು.
- ಮಂಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯು.ಟಿ.ಖಾದರ್
ಉಳ್ಳಾಲ : ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಧಾನಸಭೆ ವಿಪಕ್ಷ ಉಪನಾಯಕ, ಶಾಸಕ ಯು.ಟಿ.ಖಾದರ್ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕಾರ್ಯಕರ್ತರು ಅಭಿಮಾನಿಗಳೊಂದಿಗೆ ಮೆರವಣಿಗೆಯಲ್ಲಿ ತೆರಳಿದ ಅವರು, ಉಳ್ಳಾಲ ನಗರಸಭೆ ಕಾರ್ಯಾಲಯದಲ್ಲಿರುವ ಕ್ಷೇತ್ರ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.
- ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೋ
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಜೆ.ಆರ್. ಲೋಬೋ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಅಪಾರ ಸಂಖ್ಯೆಯಲ್ಲಿ ಪಕ್ಷದ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜತೆ ತೆರಳಿ ನಾಮಪತ್ರ ಸಲ್ಲಿಸಿದರು.
- ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ
ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಆಶಾ ತಿಮ್ಮಪ್ಪ ಇಂದು ನಾಮಪತ್ರ ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನಾಮಪತ್ರ ಸಲ್ಲಿಸುವ ವೇಳೆ ಉಪಸ್ಥಿತರಿದ್ದು, ಅಭ್ಯರ್ಥಿಗೆ ಶುಭ ಹಾರೈಸಿದರು.
- ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ
ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಬಿ.ರಮಾನಾಥ ರೈ ಇಂದು ನಾಮಪತ್ರ ಸಲ್ಲಿಸಿದರು.ಬಿ.ಸಿ.ರೋಡಿನ ವಿಧಾನಸೌಧದ ಚುನಾವಣಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ತೆರಳಿದ ಅವರು ನಾಮಪತ್ರ ಸಲ್ಲಿಸಿದರು.
ಮಂಗಳೂರು ಉತ್ತರ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ನಾಮಪತ್ರ ಸಲ್ಲಿಕೆ
ಸುರತ್ಕಲ್: ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರು ಗುರುವಾರ ಬೆಳಗ್ಗೆ ಕಾವೂರು ಮೈದಾನದಲ್ಲಿ ಬಹಿರಂಗ ಸಮಾವೇಶ ನಡೆಸಿ ಕಾವೂರು ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಭರ್ಜರಿ ರೋಡ್ ಶೋ ನಡೆಸಿದರು. ಬಳಿಕ ನಾಮಪತ್ರ ಸಲ್ಲಿಸಲು ತೆರಳಿದರು. ಈ ವೇಳೆ ಪಕ್ಷದ ಮುಖಂಡರು, ಸಹಸ್ರಾರು ಸಂಖ್ಯೆಯಲ್ಲಿದ್ದ ಕಾರ್ಯಕರ್ತರು ಸಾಥ್ ನೀಡಿದರು.